ಬೆಂಗಳೂರು: ಇಂದಿನಿಂದ (ಏಪ್ರಿಲ್ 5) ಏಪ್ರಿಲ್ 7ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಮಾತ್ರವಲ್ಲದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆಯಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಕೆಲವು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಆರ್ಭಟವೂ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ರಾಜ್ಯದಲ್ಲೇ ಗರಿಷ್ಠ ತಾಪಮಾನ ಯಾದಗಿರಿಯಲ್ಲಿ ದಾಖಲಾಗುವ ನಿರೀಕ್ಷೆಯಿದ್ದು, ಇಲ್ಲಿ 37 ಡಿಗ್ರಿ ಸೆಲ್ಸಿಯಸ್ ವರೆಗೆ ಬಿಸಿಲು ಇರಲಿದೆ. ಬಳ್ಳಾರಿ, ಕಲಬುರಗಿ ಮತ್ತು ಬಾಗಲಕೋಟೆಯಲ್ಲೂ ಕೂಡ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.
ಮಲೆನಾಡು ಭಾಗದ ಮಡಿಕೇರಿ ಮತ್ತು ಚಿಕ್ಕಮಗಳೂರಿನಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದ್ದು, ಅಲ್ಲಿ ತಂಪಾದ ಹವಾಮಾನ ಮುಂದುವರಿಯಲಿದೆ. ದಾವಣಗೆರೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಿರಲಿದೆ.





