ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 04 04T082850.508

ಬೆಂಗಳೂರು, ಏಪ್ರಿಲ್ 04: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಕಾಣಿಸಿಕೊಂಡಿದ್ದು, ಇಂದು ಕೂಡ ಮಳೆ ತನ್ನ ಆರ್ಭಟವನ್ನು ಮುಂದುವರಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಾಳಿ, ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಉತ್ತರ ಒಳನಾಡಿನ ವಿಜಯಪುರ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆ ಇದೆ.

ಯೆಲ್ಲೋ ಅಲರ್ಟ್ ನೀಡಿರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳು ಸೇರಿವೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರು ನಗರದಲ್ಲಿಯೂ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಬೆಳಿಗ್ಗೆ ಮತ್ತು ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು 30-40 ಕಿಮೀ/ಗಂ ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ ನಿಲ್ಲುವುದು, ತೆರೆದ ಪ್ರದೇಶಗಳಲ್ಲಿ ಹೆಚ್ಚು ಸಮಯ ಕಳೆಯುವುದು ತಪ್ಪಿಸಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗಾಳಿ ಮಳೆ ಜೋರಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಕೆಲವೆಡೆ ಭಾರೀ ಗಾಳಿ ಬೀಸುವ ಸಾಧ್ಯತೆ ಇದ್ದು, ಕೃಷಿಕರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಇನ್ನೊಂದೆಡೆ, ರಾಜ್ಯದ ಕೆಲವು ಭಾಗಗಳಲ್ಲಿ ಮಾತ್ರ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಜನರು ಅನಗತ್ಯ ಪ್ರಯಾಣವನ್ನು ತಪ್ಪಿಸುವುದು, ಮಿಂಚು-ಗುಡುಗಿನ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಉಳಿಯುವುದು ಹಾಗೂ ಹವಾಮಾನ ಮಾಹಿತಿಯನ್ನು ನಿರಂತರವಾಗಿ ಪರಿಶೀಲಿಸುವುದು ಮುಖ್ಯ. ಕೃಷಿಕರು ಬೆಳೆಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ.

Exit mobile version