ಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಗರ ಜೀವನ ಸ್ವಲ್ಪ ಮಟ್ಟಿನ ಅಸ್ತವ್ಯಸ್ತ ಉಂಟಾಗಿದೆ. ಇದೇ ಪರಿಸ್ಥಿತಿ ಇಂದೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಭಾನುವಾರ 18.8 ಮಿಮೀ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 19.0 ಮಿಮೀ ಮಳೆ ದಾಖಲಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 3.7 ಮಿಮೀ, ಚಿಂತಾಮಣಿಯಲ್ಲಿ 4.5 ಮಿಮೀ, ಗೋಣಿಕೊಪ್ಪಲ್‌ನಲ್ಲಿ 2.0 ಮಿಮೀ ಹಾಗೂ ದೊಡ್ಡಬಳ್ಳಾಪುರದಲ್ಲಿ 1.0 ಮಿಮೀ ಮಳೆಯಾಗಿದೆ. ಈ ಮಳೆಯ ಪರಿಣಾಮವಾಗಿ ನಗರದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿನ ಕೆಲವೆಡೆ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕೊಡಗು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆಯ ಚಟುವಟಿಕೆ ಜೋರಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಮತ್ತು ಬೆಂಗಳೂರು ಪ್ರದೇಶಗಳಲ್ಲಿ ಗಾಳಿ ಮಳೆಯು ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಬೇಕು.
ವಿಶೇಷವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹವಾಮಾನ ಮಾಹಿತಿ ಗಮನಿಸಿ ತಮ್ಮ ಕೆಲಸಗಳನ್ನು ಯೋಜಿಸುವುದು ಸೂಕ್ತ. ನಗರ ಪ್ರದೇಶಗಳಲ್ಲಿ ವಾಹನ ಸವಾರರು ಜಾರಿ ರಸ್ತೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
