ಬೆಂಗಳೂರು, ಮಾರ್ಚ್ 23: ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಬರ್ಬರ ಕೊಲೆ ಮಾಡಲಾಗಿದೆ. ಹಂತಕರು ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದು ಹೋಗಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಕೆಂಗೇರಿಯ ಮುಖ್ಯ ರಸ್ತೆಯಲ್ಲಿರುವ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ಮಹದೇಶ್ವರ ಬಡಾವಣೆಯ ನಿವಾಸಿಯಾದ ಕೆಂಪಮ್ಮ (45) ಎಂಬುವರೇ ಕೊಲೆಯಾದ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ಕಸದ ರಾಶಿಯಲ್ಲಿ ಮೃತದೇಹ ಇರುವುದನ್ನು ಗಮನಿಸಿ ತಕ್ಷಣ 112 ಸಹಾಯವಾಣಿಗೆ ಮಾಹಿತಿ ನೀಡಿದರು. ಕೆಲವೇ ಕ್ಷಣಗಳಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯ ತಲೆಗೆ ಯಾವುದೋ ಭಾರವಾದ ವಸ್ತುವಿನಿಂದ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಂತಕರು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಎಸೆದಿದ್ದಾರೆಯೇ ಅಥವಾ ಇಲ್ಲೇ ಕೃತ್ಯ ಎಸಗಿದ್ದಾರೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೃತ ಮಹಿಳೆ ಕೆಂಪಮ್ಮ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಕೂಡ ಸ್ಥಳಕ್ಕೆ ಆಗಮಿಸಿ ಬೆರಳಚ್ಚು, ಸುಳಿವುಗಳು ಮತ್ತು ಇತರೆ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಜನನಿಬಿಡ ಪ್ರದೇಶವಾದ ಕೆಂಗೇರಿಯ ಮೈಲ್ಸಂದ್ರದ ಬಳಿಯೇ ಇಂತಹ ಘಟನೆ ನಡೆದಿರುವುದು ಸ್ಥಳೀಯ ನಿವಾಸಿಗಳನ್ನು ಆತಂಕ ಉಂಟು ಮಾಡಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.





