ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಅವರನ್ನು ಮತ್ತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವಂತೆ ಆದೇಶಿಸಿದೆ.
ಪಶುವೈದ್ಯಕೀಯ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ಲಂಚ ಪಡೆದ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿತ್ತು. ಈ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 10ರಂದು ಅಮಾನತು ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಈ ಕ್ರಮವನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು ಪ್ರಕರಣದ ವಿಚಾರಣೆ ನಡೆಸಿ ಮಹತ್ವದ ಆದೇಶ ನೀಡಿದೆ. ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವ ಕುರಿತು ಸಚಿವ ಸಂಪುಟದಿಂದ ಯಾವುದೇ ಸಲಹೆ ಅಥವಾ ಶಿಫಾರಸು ಮಾಡಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಪರಿಗಣಿಸಿದೆ.
ಸಚಿವ ಸಂಪುಟದ ಸಲಹೆ ಮತ್ತು ಸಂವಿಧಾನಾತ್ಮಕ ಪ್ರಕ್ರಿಯೆಗೆ ಸಂಬಂಧಿಸಿದ ಅಂಶಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಅನುಸರಿಸಬೇಕಾದ ಸಂದರ್ಭವಿದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಸಚಿವ ಸಂಪುಟದ ಶಿಫಾರಸು ಇಲ್ಲದೆ ಹೊರಡಿಸಲಾದ ಅಮಾನತು ಆದೇಶವನ್ನು ಮುಂದುವರಿಸಲು ಸಾಧ್ಯವಿಲ್ಲ ಎಂಬ ನಿಲುವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ.
ಜುಲೈ 10ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್, ಶಿವಶಂಕರಪ್ಪ ಸಾಹುಕಾರ್ ಅವರನ್ನು ಮತ್ತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಸೂಚಿಸಿದೆ. ಅಲ್ಲದೆ, ಏಳು ದಿನಗಳೊಳಗೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದೆ. ಈ ತೀರ್ಪಿನ ಹಿನ್ನೆಲೆ ಕೆಪಿಎಸ್‌ಸಿಯಲ್ಲಿ ಮತ್ತೆ ಶಿವಶಂಕರಪ್ಪ ಸಾಹುಕಾರ್ ಅವರ ಅಧಿಕಾರ ಮುಂದುವರಿಯುವಂತಾಗಿದೆ.





