KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

ಬೆಂಗಳೂರು ಸೆ. 09: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಇಂದು 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಸದ್ಯಕ್ಕೆ ಮತ್ತಷ್ಟು ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದೇ ವೇಳೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಐಡಿ, ನಾಪತ್ತೆಯಾಗಿರುವ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಅವರ ಮನೆಗಳ ಮೇಲೂ ದಾಳಿ ನಡೆಸಿದೆ. ಬೆಂಗಳೂರಿನ ಮತ್ತಿಕೆರೆ ಹಾಗೂ ನಾಗರಬಾವಿಯಲ್ಲಿರುವ ಮನೆಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಶಾಂತ ಹೊಸಮನಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಶಾಂತ ಹೊಸಮನಿ ಕಡೆಯಿಂದ ನೇಮಕವಾಗಿದ್ದಾರೆ ಎನ್ನಲಾದ ಅಭ್ಯರ್ಥಿ ಮಮತಾ ಅವರ ಕಲಬುರಗಿ ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ನಿವಾಸದ ಮೇಲೂ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಾಂತ ಹೊಸಮನಿ ಹಾಗೂ ಮಮತಾ ಇಬ್ಬರೂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ಬಸವರಾಜ್ ಕನ್ನಾಳೆ ಅವರೊಂದಿಗೆ ಆಪ್ತ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಕೆಲವರ ಮೇಲೂ ಸಿಐಡಿ ತನಿಖೆಯ ಕಣ್ಣು ಬಿದ್ದಿದೆ. ಕನ್ನಾಳೆ ಅವರ ಖಾತೆಗೆ ಹಣ ವರ್ಗಾವಣೆ ಹಾಗೂ ಹೂಡಿಕೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಬೀದರ್‌ನ ಪವನ್ ರೆಡ್ಡಿ, ಕೆಲ ಕಂಪನಿ ಮಾಲೀಕರು, ಆರ್‌ಟಿಓ ಇನ್ಸ್‌ಪೆಕ್ಟರ್ ರಾಜಶೇಖರ್ ಚಿದ್ರಿ ಹಾಗೂ ಭಾಲ್ಕಿ ಸಹಕಾರಿ ಬ್ಯಾಂಕ್ ನಿರ್ದೇಶಕ ಓಂಕಾರ್ ಅವರ ವಿಚಾರಣೆಯ ಸಾಧ್ಯತೆ ಇದೆ.

ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು, ನೇಮಕಾತಿ ಪ್ರಕ್ರಿಯೆ ಹಾಗೂ ಆರೋಪಿಗಳ ನಡುವಿನ ಸಂಪರ್ಕಗಳ ಕುರಿತು ಸಿಐಡಿ ತನಿಖೆ ಮುಂದುವರಿಸಿದೆ. ತನಿಖೆಯ ಮುಂದಿನ ಹಂತದಲ್ಲಿ ಇನ್ನಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.

Exit mobile version