ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿ ಮನೆಯಲ್ಲಿ ಇಲ್ಲದ ಹಿನ್ನೆಲೆ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗದ ಬಳಿಕ ಅಧಿಕಾರಿಗಳು ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
KPSC ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪಶುವೈದ್ಯಾಧಿಕಾರಿಗಳ ನೇಮಕಾತಿ ಹಾಗೂ KAS ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಆರೋಪಗಳ ಹಿನ್ನೆಲೆ ಈ ತನಿಖೆ ನಡೆಯುತ್ತಿದೆ.
ಜ್ಞಾನೇಂದ್ರ ಕುಮಾರ್ ಮನೆಗೆ ED ತಂಡ
ಜ್ಞಾನೇಂದ್ರ ಕುಮಾರ್ ಅವರು ಈ ಹಿಂದೆ KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳ ಉಸ್ತುವಾರಿ ವಹಿಸಿದ್ದರು ಎನ್ನಲಾಗಿದೆ. ಹೀಗಾಗಿ ನೇಮಕಾತಿ ಅಕ್ರಮದ ತನಿಖೆಯ ಭಾಗವಾಗಿ ಅವರ ನಿವಾಸದ ಮೇಲೂ ED ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ನಿವಾಸಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿ ಗೇಟ್ ತೆರೆಯಲು ನಿರಾಕರಿಸಿದ್ದರೆನ್ನಲಾಗಿದೆ. ಜ್ಞಾನೇಂದ್ರ ಕುಮಾರ್ ಮನೆಯಲ್ಲಿ ಇಲ್ಲ ಎಂದು ಸಿಬ್ಬಂದಿ ತಿಳಿಸಿದ್ದಲ್ಲದೆ, ಅವರ ಮೊಬೈಲ್ ಫೋನ್‌ಗೂ ಸಂಪರ್ಕ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ.
ಮೂರು ಇನೋವಾ ಕಾರುಗಳಲ್ಲಿ ED ಅಧಿಕಾರಿಗಳು ಆಗಮಿಸಿದ್ದು, ಅವರೊಂದಿಗೆ CRPF ಸಿಬ್ಬಂದಿಯೂ ಭದ್ರತೆಗೆ ನಿಯೋಜನೆಗೊಂಡಿದ್ದರು ಎಂದು ತಿಳಿದುಬಂದಿದೆ. ಅಪಾರ್ಟ್‌ಮೆಂಟ್ ಪ್ರವೇಶದ ಬಳಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ತನಿಖೆಯ ಹಿನ್ನೆಲೆ ED ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಮನೆಯಲ್ಲಿದ್ದ ಸಿಬ್ಬಂದಿ ಅಧಿಕಾರಿ ನಿವಾಸದಲ್ಲಿ ಇಲ್ಲ ಎಂದು ತಿಳಿಸಿದ್ದರಿಂದ ಅಧಿಕಾರಿಗಳಿಗೆ ಆರಂಭದಲ್ಲಿ ಪ್ರವೇಶಕ್ಕೆ ಅಡಚಣೆ ಎದುರಾಯಿತು ಎನ್ನಲಾಗಿದೆ. ಬಳಿಕ ಅಧಿಕಾರಿಗಳು ಕಾನೂನುಬದ್ಧ ಪ್ರಕ್ರಿಯೆಯಂತೆ ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ, ಜ್ಞಾನೇಂದ್ರ ಕುಮಾರ್ ಅವರು ಆಗಸ್ಟ್ 20ರಂದು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ಮಧ್ಯಾಹ್ನ 3 ಗಂಟೆಯ ವಿಮಾನಕ್ಕೆ ಸುಮಾರು 1 ಗಂಟೆ 31 ನಿಮಿಷಕ್ಕೆ ಟಿಕೆಟ್ ಬುಕ್ ಮಾಡಲಾಗಿತ್ತು ಎನ್ನಲಾಗಿದೆ. ಸುಮಾರು ₹30,253 ಪಾವತಿಸಿ ಇಂಡಿಗೋ ವಿಮಾನದ ಟಿಕೆಟ್ ಕಾಯ್ದಿರಿಸಲಾಗಿದ್ದು, HDFC ಕ್ರೆಡಿಟ್ ಕಾರ್ಡ್ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತನಿಖೆಯ ನಡುವೆ ತುರ್ತಾಗಿ ವಿಮಾನ ಟಿಕೆಟ್ ಬುಕ್ ಮಾಡಿಕೊಂಡು ದೆಹಲಿಗೆ ತೆರಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರು ದೆಹಲಿಗೆ ತೆರಳಿರುವುದಕ್ಕೂ ED ದಾಳಿಗೂ ನೇರ ಸಂಬಂಧವಿದೆಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
