ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಹಾಗೂ ಜಿಬಿಎ (GBA) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನವು ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಅನ್ವಯ ಜಾರಿಗೊಳ್ಳುತ್ತಿರುವ ಕ್ರಮವಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ಅತ್ಯಂತ ಗಂಭೀರ ಕಾನೂನು ಉಲ್ಲಂಘನೆಯಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಹಲ್ಲೆ ನಡೆಸಿದವರು ಜೀವನೋಪಾಯಕ್ಕಾಗಿ ದುಡಿಯುತ್ತಿರುವ ಬಡ ಜನರಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವ ಸಮಾಜಘಾತುಕ ಶಕ್ತಿಗಳೇ ಈ ಕೃತ್ಯ ಎಸಗಿವೆ ಎಂದು ಆರೋಪಿಸಿರುವ ಅವರು, ಸಾರ್ವಜನಿಕ ಕರ್ತವ್ಯದಲ್ಲಿರುವ ಅಧಿಕಾರಿಗಳ ಸುರಕ್ಷತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕಾನೂನು ಪಾಲನೆಗಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಪರವಾಗಿ ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.
ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುವ ಯಾರನ್ನೂ ಬಿಡುವುದಿಲ್ಲ. ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ತಪ್ಪಿತಸ್ಥರನ್ನು ಗುರುತಿಸಿ ಬಂಧಿಸುವ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಂಕಿತ ದಾಳಿಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿಯ ಹಿಂದಿನ ಪ್ರಮುಖ ಸೂತ್ರಧಾರನೆಂದು ಗುರುತಿಸಲಾದ ಬಸವರಾಜ ಪುದುಕೋಟೆ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದಲ್ಲದೆ, ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಕಠಿಣ ವಿಧಿಗಳ ಜೊತೆಗೆ ಕೊಲೆ ಯತ್ನಕ್ಕೆ ಸಮಾನವಾದ ಗಂಭೀರ ಆರೋಪಗಳಡಿ, ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ಕ್ಕೆ ಸಮಾನವಾದ ಕಾನೂನು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ. ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಮಾದರಿಯಾಗುವಂತಹ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಸಚಿವರು ತಾವು ಜಿಬಿಎ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಕಟ ನಿಗಾ ವಹಿಸಿರುವುದಾಗಿ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಭದ್ರತೆ ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
