ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದು (ಡಿ.16) ಮುಂಜಾನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧುಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬೆಂಗಳೂರು, ಧಾರವಾಡ, ಶಿವಮೊಗ್ಗ, ಮಂಡ್ಯ ಮತ್ತು ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಿರಿಯ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ.
ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿ ವಾಸವಿರುವ ಬೆಳಗಾವಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ್ ಅವರ ನಿವಾಸದ ಮೇಲೆ ನಡೆದ ದಾಳಿ ಭಾರೀ ಸದ್ದು ಮಾಡಿದೆ. ಲೋಕಾಯುಕ್ತ ಪೊಲೀಸರು ಮನೆ ಬಾಗಿಲು ತಟ್ಟಿದಾಗ ಸುಮಾರು ಅರ್ಧ ಗಂಟೆಯವರೆಗೆ ಬಾಗಿಲು ತೆರೆಯದೆ ಸತಾಯಿಸಿದ್ದಾರೆ.
ಈ ಅವಧಿಯಲ್ಲಿ ತಮ್ಮ ಬಳಿಯಿದ್ದ ಸುಮಾರು 50 ಸಾವಿರ ಅಕ್ರಮ ಹಣವನ್ನು ಶೌಚಾಲಯದ ಕಮೋಡ್‌ಗೆ ಸುರಿದು ಫ್ಲಶ್ ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಸತತ ಪ್ರಯತ್ನದ ನಂತರ ಬಾಗಿಲು ತೆರೆದಾಗ ಈ ವಿಷಯ ಬೆಳಕಿಗೆ ಬಂದಿದೆ. ರಾಜಶೇಖರ್‌ಗೆ ಸೇರಿದ ರಾಣಿ ಚೆನ್ನಮ್ಮ ನಗರದ ಖಾಸಗಿ ಕಚೇರಿ ಹಾಗೂ ಯರಿಕೊಪ್ಪ ಗ್ರಾಮದ ಬಳಿಯಿರುವ ಫಾರ್ಮ್ ಹೌಸ್ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಅವರ ವಿರುದ್ದವೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಗಂಭೀರ ಆರೋಪ ಕೇಳಿಬಂದಿತ್ತು. ಹೀಗಾಗಿ ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಇವರಿಗೆ ಸೇರಿದ ಆಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಬಸವನಗುಡಿ ಮತ್ತು ಕೆಂಗೇರಿಯಲ್ಲಿರುವ ನಿವಾಸಗಳು, ಶಿವಮೊಗ್ಗದ ಕಚೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿರುವ ಮನೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಮಂಡ್ಯದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ (PRED) ಸೂಪರಿಂಟೆಂಡೆಂಟ್ ಬೈರೇಶ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಸಾರ್ವಜನಿಕರಿಂದ ಬಂದ ಸಾಲು ಸಾಲು ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯದ ನಿವಾಸ ಮಾತ್ರವಲ್ಲದೆ, ಮದ್ದೂರಿನಲ್ಲಿರುವ ಅವರ ಅತ್ತೆ ಮನೆ ಮತ್ತು ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈರೇಶ್ ಅವರ ಆಸ್ತಿ ವಿವರ ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.





