ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಹಾಗೂ ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಹೌಸಿಂಗ್ ಬೋರ್ಡ್‌ನಲ್ಲಿರುವ ನಿವಾಸ, ಕಡೂರಿನಲ್ಲಿರುವ ಅವರ ಸಹೋದರಿಯ ಮನೆ ಸೇರಿದಂತೆ ಹಲವು ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್, NWKRTC ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ್ ಹಾಗೂ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರ ಆಸ್ತಿ ಮತ್ತು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದಾವಣಗೆರೆ, ಹರಪನಹಳ್ಳಿ, ಬೆಳಗಾವಿ, ಹುಬ್ಬಳ್ಳಿ ಹಾಗೂ ವಿಜಯನಗರ ಸೇರಿದಂತೆ ಒಟ್ಟು 12 ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.
ಕಲಬುರಗಿಯಲ್ಲಿ ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಅಧೀಕ್ಷಕ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ದಾಳಿ ನಡೆದಿದೆ. ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ತೋಟದ ಮನೆ, ಹುಮನಾಬಾದ್‌ನ ಎರಡು ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹುಮನಾಬಾದ್‌ನಲ್ಲಿ ಎರಡು ಕಾಂಪ್ಲೆಕ್ಸ್, ಹಳ್ಳಿಖೇಡದಲ್ಲಿ 20 ಎಕರೆ ತೋಟ ಹಾಗೂ ಕಲಬುರಗಿಯಲ್ಲಿ ಎರಡು ಮನೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇದೇ ವೇಳೆ ಬೆಂಗಳೂರಿನಲ್ಲೂ ಇಬ್ಬರು ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕರ್ನಾಟಕ ಹೌಸಿಂಗ್ ಬೋರ್ಡ್‌ನ ಹೆಚ್ಚುವರಿ ನಿರ್ದೇಶಕ ರಾಜಣ್ಣ ಹಾಗೂ ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ್ ಕುಮಾರ್ ಅವರ ಯಲಹಂಕದ ನಿವಾಸಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಈ ದಾಳಿಗಳು ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಸಂಪಾದನೆ ವಿರುದ್ಧ ಲೋಕಾಯುಕ್ತ ಕೈಗೊಂಡಿರುವ ಮಹತ್ವದ ಕ್ರಮ ಆಗಿದ್ದು, ತನಿಖೆ ಮುಂದುವರಿದಿದೆ.





