ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಮತ್ತು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ಸರ್ಕಾರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಕೇವಲ ರಾಜಕೀಯ ಕಾರಣಕ್ಕಾಗಿ ಹೋರಾಟ ನಡೆಸುವುದು ಸರಿಯಲ್ಲ ಎಂದಿದ್ದಾರೆ.
ಬಿಡದಿ ಪಾದಯಾತ್ರೆಗೆ ಸರ್ಕಾರ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಈ ವಿಚಾರದಲ್ಲಿ ಸ್ಪಷ್ಟವಾಗಿ ಮಾತನಾಡಿದ್ದು, ಜನರಿಗೆ ತೊಂದರೆ ನೀಡುವುದಿಲ್ಲ ಹಾಗೂ ಒತ್ತಾಯಪೂರ್ವಕವಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗಲೂ ಜೆಡಿಎಸ್-ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ರಾಜಕೀಯ ಕಾರಣಕ್ಕಾಗಿ ಎಂಬುದು ತಮ್ಮ ಅಭಿಪ್ರಾಯ ಎಂದು ತಿಳಿಸಿದ್ದಾರೆ.
ಪಾದಯಾತ್ರೆ ಮಾಡಬೇಡಿ ಎಂದು ನಾವು ಹೇಳುವುದಿಲ್ಲ. ಅವರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ, ಬೇರೆ ವಿಚಾರಗಳಿದ್ದರೆ ಅವುಗಳ ಬಗ್ಗೆ ಚರ್ಚೆ ಮಾಡಲಿ. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ ನಂತರವೂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಲಾಠಿಚಾರ್ಜ್ ಮಾಡಿಸಲಾಗಿತ್ತು. ತಮ್ಮ ಸರ್ಕಾರ ಪ್ರತಿಭಟನೆಗಳಿಗೆ ಅವಕಾಶ ನೀಡುತ್ತಿದೆ ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡ ಅವರು, ಪ್ರಸ್ತುತ ಸರ್ಕಾರ ಯಾವುದೇ ರೀತಿಯ ಬಲಪ್ರಯೋಗಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ
ಇದೇ ವೇಳೆ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರದ ಬಗ್ಗೆಯೂ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ಖಾತೆ ಹಂಚಿಕೆ ಕುರಿತು ಯಾವುದೇ ಸೂಚನೆ ಬಂದಿಲ್ಲ. ಈಗಾಗಲೇ ಸರ್ಕಾರ ತಮ್ಮೆಲ್ಲರಿಗೂ ಸಾಕಷ್ಟು ಜವಾಬ್ದಾರಿಗಳನ್ನು ನೀಡಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಬರ ಮತ್ತು ಅತಿವೃಷ್ಟಿ ಪರಿಸ್ಥಿತಿಯ ಪರಿಶೀಲನೆಯ ಜವಾಬ್ದಾರಿ ನೀಡಲಾಗಿತ್ತು. ಅದರಂತೆ ಮೂರು ದಿನಗಳ ಕಾಲ ವಿವಿಧ ಪ್ರದೇಶಗಳಿಗೆ ತೆರಳಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಅತಿವೃಷ್ಟಿಯಿಂದ ಮೂರು ಮಂದಿ ಮೃತಪಟ್ಟಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವುದಾಗಿ ಹೇಳಿದ್ದಾರೆ.
ಸದ್ಯ 13 ಮಂದಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಸಚಿವರಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಈ ಬಗ್ಗೆ ತಾವೇ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ದೆಹಲಿಯಿಂದ ಹೊರಟಿದ್ದು, ಇಂದೇ ಸಂಜೆಯೊಳಗೆ ಈ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಹೇಳಿದ್ದಾರೆ.
ವಿಜಯೇಂದ್ರ ಹೇಳಿಕೆಗೆ ತಿರುಗೇಟು
ಖಾತೆ ಹಂಚಿಕೆಯಾಗದೆ ಸಚಿವರು ‘ಖಾತೆ ರಹಿತ ಸಚಿವರು’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ನಮಗೆ ಮಂತ್ರಿಯನ್ನಾದರೂ ಮಾಡಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.
ವಿಜಯೇಂದ್ರ ಅವರ ತಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿರಲಿಲ್ಲ ಎಂದು ಟೀಕಿಸಿದ ಅವರು, ಈಗಾಗಲೇ 13 ಮಂದಿ ಸಚಿವರಿಗೆ ಖಾತೆ ನೀಡಲಾಗಿದೆ. ಉಳಿದ ಸಚಿವರಿಗೂ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
