ಕೊಪ್ಪಳ: ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಮತ್ತು ಪಠ್ಯಪುಸ್ತಕಗಳ ವಿತರಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಮನವಿ ಸಲ್ಲಿಸಲು ಬಂದಿದ್ದ ಎಸ್ಡಿಎಂಸಿ ಸಮನ್ವಯ ಸಮಿತಿ ಅಧ್ಯಕ್ಷರ ಮೇಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರದಿಂದ ನೀಡಬೇಕಾದ ಶೂ ಮತ್ತು ಸಾಕ್ಸ್ ಇನ್ನೂ ಹಲವೆಡೆ ತಲುಪಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಸಮನ್ವಯ ಸಮಿತಿ ಅಧ್ಯಕ್ಷ ದೇವರಾಜ ಕಿನ್ನಾಳ ಅವರು ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕಗಳ ವಿತರಣೆಯಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆಯಲು ಮುಂದಾಗಿದ್ದರು. ಆದರೆ, ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಲು ಬಂದವರೊಂದಿಗೆ ಸಚಿವರು ತಾಳ್ಮೆಯಿಂದ ಮಾತನಾಡುವ ಬದಲು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎರಡು ದಿನಗಳ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊಪ್ಪಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವೇಳೆ ದೇವರಾಜ ಕಿನ್ನಾಳ ಅವರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ ಪಠ್ಯಪುಸ್ತಕಗಳ ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ಸಚಿವರ ಗಮನಕ್ಕೆ ತಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ಆಕ್ಷೇಪಾರ್ಹ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎನ್ನಲಾಗಿದೆ. ‘ಯಾವನಯ್ಯಾ ಕೊಡ್ತಾನೆ, ಕೇಳುವ ಯೋಗ್ಯತೆ ಇಲ್ಲ ನಿಮಗೆ. ಯೋಗ್ಯತೆ ಇಲ್ಲ ಅಂದ್ರೆ ಸುಮ್ಮನಿರಬೇಕು’ ಎಂಬ ರೀತಿಯಲ್ಲಿ ಸಚಿವರು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಧು ಬಂಗಾರಪ್ಪ ವಿರುದ್ಧ ವಿಜಯೇಂದ್ರ ಕಿಡಿ
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವರ ವರ್ತನೆಯನ್ನು ಖಂಡಿಸಿರುವ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಉದ್ದಟತನದಿಂದ ವರ್ತಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
‘ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ರಂತೆ’ ಎಂಬ ಮಾತಿನಂತೆ ಸಚಿವರ ವರ್ತನೆ ಇದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ. ಮಧು ಬಂಗಾರಪ್ಪ ಅವರ ಉದ್ದಟತನದ ಹೇಳಿಕೆಯನ್ನು ರಾಜ್ಯಾದ್ಯಂತ ಜನರು ಖಂಡಿಸುತ್ತಿದ್ದಾರೆ. ಇಂತಹ ಅವಿವೇಕತನದ ನಡವಳಿಕೆಯನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಶಿಕ್ಷಣ ಸಚಿವರಿಗೆ ಗೌರವ ಇದ್ದರೆ, ಸಮಸ್ಯೆ ಹೇಳಿಕೊಳ್ಳಲು ಬಂದವರೊಂದಿಗೆ ನಡೆದುಕೊಂಡ ರೀತಿಗೆ ಕ್ಷಮೆ ಕೇಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. ಮಕ್ಕಳಿಗೆ ಶೂ, ಸಾಕ್ಸ್ ನೀಡುವಂತೆ ಮನವಿ ಸಲ್ಲಿಸುವುದು ತಪ್ಪಲ್ಲ. ಬದಲಿಗೆ ಇಂತಹ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸುವುದು ಸರ್ಕಾರದ ಕರ್ತವ್ಯ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
