ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿವಾದಾತ್ಮಕ ವಿಡಿಯೋಗಳ ಬೆನ್ನಲ್ಲೇ ಅವರ ವಿರುದ್ಧ ಕಾನೂನು ಕ್ರಮ ಜೋರಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದು ಪ್ರಸಿದ್ಧಿಯಾಗಿದ್ದ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಬಾಲಕಿಯರ ಕತ್ತು ಹಿಸುಕುವುದು, ಹಿಂಸಿಸುವ ರೀತಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಮುತ್ಯಾ ತಲೆಮರೆಸಿಕೊಂಡಿರುವ ಆರೋಪ ಕೇಳಿಬಂದಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ “ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ವಿವಿಧ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ವೈರಲ್ ಆಗಿರುವ ವಿಡಿಯೋಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದ್ದಾರೆ.
ವಿಡಿಯೋದಲ್ಲಿ ಮಾತನಾಡಿದ ಮುತ್ಯಾ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮನವಿ ಮಾಡಿದ್ದಾರೆ. “ಇದು ಆತಂಕ ಪಡುವ ವಿಷಯವಲ್ಲ. ನಾನು ಮಹಲ್ ರೋಜಾ ಜಾತ್ರೆಯ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ನೀಡಲು ಬಂದಿದ್ದೇನೆ. ಮಾರ್ಚ್ 13ರಂದು ಮಹಲ್ ರೋಜಾದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಅದರ ಆಹ್ವಾನ ನೀಡಲು ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮಠಕ್ಕೆ ಪೊಲೀಸರು ಬಂದಿರುವ ಮಾಹಿತಿ ತಮಗೆ ತಿಳಿದಿದೆ ಎಂದು ಹೇಳಿರುವ ಅವರು, “ಪೊಲೀಸರು ವಿಚಾರಣೆಗೆ ಕರೆದರೆ ಖಂಡಿತವಾಗಿ ಹಾಜರಾಗುತ್ತೇನೆ. ನಾನು ಕಾನೂನಿಗೆ ಗೌರವ ನೀಡುತ್ತೇನೆ” ಎಂದು ತಿಳಿಸಿದ್ದಾರೆ. ತಾನು ಪರಾರಿಯಾಗಿಲ್ಲ ಎಂದು ಪುನರುಚ್ಚರಿಸಿದ ಅವರು, ಭಕ್ತರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಪ್ರಕರಣ ಗಂಭೀರವಾಗಿರುವ ಹಿನ್ನೆಲೆ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಕ್ಕಳ ಹಕ್ಕುಗಳ ಆಯೋಗ ಯಾದಗಿರಿ ಎಸ್‌ಪಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿದುಬರುವ ತನಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.




