ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹತ್ತು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ
ಮೊದಲು ಎರಡು ಬಸ್‌ಗಳು ವೇಗದಿಂದ ಬರುತ್ತಿದ್ದ ಸಂದರ್ಭದಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದಾಗಿ ರಸ್ತೆಯ ಮಧ್ಯದಲ್ಲಿ ನಿಂತಿದ್ದ ಬಸ್‌ಗಳಿಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಗುದ್ದಿದೆ. ಡಿಕ್ಕಿ ಹೊಡೆದ ಪರಿಣಾಮ ಬಸ್‌ಗಳ ಮುಂಭಾಗಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಪ್ರಯಾಣಿಕರು ಕಿಟಕಿಗಳಿಂದ ಹೊರಬಿದ್ದು ಗಾಯಗೊಂಡಿದ್ದಾರೆ. ಅದರಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಈ ಘಟನೆಯಲ್ಲಿ ಮೃತಪಟ್ಟವರು ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಮೊದಲು 60 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. ನಂತರ ಇನ್ನಿಬ್ಬರು ಸಹ ಮೃತಪಟ್ಟಿದ್ದಾರೆ. ಮೃತರ ಗುರುತು ಮತ್ತು ವಿವರಗಳು ಇನ್ನೂ ಸಂಪೂರ್ಣವಾಗಿ ತಿಳಿದುಬಂದಿಲ್ಲ. ಪೊಲೀಸರು ಈ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗಂಭೀರ ಗಾಯಗೊಂಡವರ ಸಂಖ್ಯೆ 10ಕ್ಕೂ ಹೆಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಘಟನಾ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





