ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ (New Year Celebration) ಇನ್ನೇನು ಕೆಲವೇ ದಿನಗಳಲ್ಲಿ ಬರಲಿದ್ದು, ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು, ಪಾರ್ಟಿ ಹಬ್‌ಗಳು ಪ್ರವಾಸಿಗರಿಂದ ತುಂಬುವ ನಿರೀಕ್ಷೆಯಿದೆ. ಆದರೆ, ಕರ್ನಾಟಕದ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ನಂದಿ ಗಿರಿಧಾಮದಲ್ಲಿ (Nandi Hills) ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10 ಗಂಟೆಯವರೆಗೂ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರತಿ ವರ್ಷ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಂದಿ ಬೆಟ್ಟಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ವಿಶೇಷವಾಗಿ ಡಿಸೆಂಬರ್ 31ರ ರಾತ್ರಿ ಹಾಗೂ ಜನವರಿ 1ರ ಮುಂಜಾನೆ ಸೂರ್ಯೋದಯ ವೀಕ್ಷಣೆಗೆ ಜನಸಂದಣಿ ಹೆಚ್ಚಾಗುತ್ತದೆ. ಈ ಭಾರೀ ಜನಸಾಗರದಿಂದಾಗಿ ಸಂಚಾರ ಸಮಸ್ಯೆ, ಗಲಾಟೆ, ಮದ್ಯಪಾನ, ಅಸಭ್ಯ ವರ್ತನೆ ಹಾಗೂ ಅಪಘಾತಗಳ ಸಂಭವ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಈ ಬಾರಿ ಮುನ್ನೆಚ್ಚರಿಕೆ ವಹಿಸಿದೆ.
ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಕಳೆದ ಕೆಲವು ವರ್ಷಗಳಲ್ಲಿ ಹೊಸ ವರ್ಷಾಚರಣೆಯ ವೇಳೆ ನಂದಿ ಬೆಟ್ಟದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗಿದ್ದವು. ಈ ಕಾರಣದಿಂದಾಗಿ ಸಾರ್ವಜನಿಕ ಸುರಕ್ಷತೆಯೇ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಆದರೆ, ನಂದಿ ಬೆಟ್ಟದ ಮೇಲ್ಭಾಗದಲ್ಲಿರುವ ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ಮುಂಗಡವಾಗಿ ರೂಮ್ ಬುಕ್ ಮಾಡಿಕೊಂಡಿರುವ ಪ್ರವಾಸಿಗರಿಗೆ ಮಾತ್ರ ವಿಶೇಷ ವಿನಾಯಿತಿ ನೀಡಲಾಗಿದೆ. ಇಂತಹ ಪ್ರವಾಸಿಗರು ಹೋಟೆಲ್ ಬುಕ್ಕಿಂಗ್ ದಾಖಲೆಗಳನ್ನು ತೋರಿಸಿ ಪ್ರವೇಶ ಪಡೆಯಬಹುದಾಗಿದೆ. ಆದರೆ, ಅವರಿಗೂ ಸಹ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ.
ನಂದಿ ಬೆಟ್ಟದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ತಪಾಸಣೆ ಮತ್ತಷ್ಟು ಕಟ್ಟುನಿಟ್ಟಾ ನಡೆಯಲಿದೆ. ಮದ್ಯಪಾನ ಮಾಡಿ ವಾಹನ ಚಾಲನೆ, ಗಲಾಟೆ, ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಚಟುವಟಿಕೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತ ಪ್ರವಾಸಿಗರಿಗೆ ಪರ್ಯಾಯವಾಗಿ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತೆ ಸಲಹೆ ನೀಡಿದೆ. ಹೊಸ ವರ್ಷವನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವುದು ಎಲ್ಲರ ಹೊಣೆಗಾರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದ್ದಾರೆ.





