ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದಿದ್ದು, ಸ್ಥಳದಲ್ಲೇ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ಈ ದುರ್ಘಟನೆ ನಡೆದಿದೆ.
ಮೃತ ಯುವತಿಯನ್ನು ಹೆಬ್ಬಾಳ ನಿವಾಸಿಯಾದ ಕೀರ್ತನಾ (24) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಭಾಸ್ಕರ್ ಎಂಬ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೀರ್ತನಾ, ಬಿಇ ಇಂಜಿನಿಯರಿಂಗ್ ಪದವೀಧರರಾಗಿದ್ದು, ಸ್ಯಾಂಡಲ್‌ವುಡ್ ಕ್ರಿಕೆಟ್ ಲೀಗ್‌ನಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಕೀರ್ತನಾ ಮತ್ತು ಭಾಸ್ಕರ್ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಯಾವುದೇ ಮುನ್ಸೂಚನೆಯಿಲ್ಲದೆ ಬುಡಸಮೇತ ಉರುಳಿ ರಸ್ತೆಗೆ ಬಿದ್ದಿದೆ. ಇದರಿಂದ ಕೀರ್ತನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಆದರೆ ಭಾಸ್ಕರ್ ಗಂಭೀರ ಗಾಯಗಳೊಂದಿಗೆ ಬದುಕುಳಿದಿದ್ದಾರೆ.
ಸ್ಥಳೀಯರು ತಕ್ಷಣವೇ ಗಾಯಾಳು ಭಾಸ್ಕರ್‌ನನ್ನು ಆಸ್ಪತ್ರೆಗೆ ರವಾನಿಸಿದರು. ಸೋಲದೇವನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯ ಮೇಲೆ ಬಿದ್ದ ಮರದಿಂದಾಗಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಸ್ಥಳೀಯ ಅಧಿಕಾರಿಗಳು ಮರ ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡರು. ಕೀರ್ತನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಯಿತು.