ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪಾದಯಾತ್ರೆ ಸಂಪೂರ್ಣ ನಿಷೇಧ!

Untitled design 2026 01 23T222625.713

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಚಿರತೆ ದಾಳಿ ಪ್ರಕರಣವು ಭಕ್ತರಲ್ಲಿ ಆತಂಕ ಮೂಡಿಸಿದೆ. ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ (30) ಎಂಬ ಯುವಕ ಚಿರತೆ ದಾಳಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ.

ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆ ಸಂಪೂರ್ಣ ನಿಷೇಧ ಎಂದು ಚಾಮರಾಜನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಪಾದಯಾತ್ರೆ ನಡೆಸಲು ನಿರ್ಬಂಧ ವಿಧಿಸಲಾಗಿದೆ. ವಿಶೇಷವಾಗಿ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ಅರಣ್ಯ ಪ್ರದೇಶದಲ್ಲಿ ಚಿರತೆ ಹಾಗೂ ಕಾಡಾನೆಗಳ ಸಂಚಾರ ಹೆಚ್ಚಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಭಕ್ತರ ಜೀವ ರಕ್ಷಣೆ ಹಾಗೂ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಧಿಕಾರಿಗಳು ಈ ಆದೇಶವನ್ನು ಜಾರಿಗೊಳಿಸಿದ್ದಾರೆ. ಈ ಕುರಿತು ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಅವರು ಪ್ರತಿಕ್ರಿಯಿಸಿ, ಭಕ್ತರು ಜಿಲ್ಲಾಡಳಿತ ಹಾಗೂ ಪ್ರಾಧಿಕಾರಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಜನವರಿ ತಿಂಗಳಲ್ಲಿ ಮಹಾಶಿವರಾತ್ರಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಹಿನ್ನೆಲೆಯಲ್ಲಿ ಭಕ್ತರ ಸಂಚಾರ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಕಾಡುಪ್ರಾಣಿಗಳ ದಾಳಿ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ವಿಧಿಸಲಾಗಿದೆ.

ಜನವರಿ 21ರಂದು ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಪ್ರವೀಣ್ ಮೇಲೆ ಚಿರತೆಯು ಏಕಾಏಕಿ ದಾಳಿ ನಡೆಸಿ ಅರಣ್ಯದೊಳಗೆ ಎಳೆದೊಯ್ದಿತ್ತು. ಜತೆಯಲ್ಲಿದ್ದ ಸ್ನೇಹಿತರು ಕಿರುಚಾಡಿ ಚಿರತೆಯನ್ನು ಓಡಿಸಲು ಯತ್ನಿಸಿದರೂ, ಪ್ರಾಣ ಉಳಿಸಲು ಸಾಧ್ಯವಾಗಿರಲಿಲ್ಲ. ನಂತರ ಅರಣ್ಯ ಇಲಾಖೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೀಣ್ ಅವರ ಮೃತದೇಹವನ್ನು ಪತ್ತೆ ಹಚ್ಚಿದರು.

ಘಟನೆಯ ಬಳಿಕ ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ನಡೆಸಿ, ದಾಳಿ ನಡೆಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಆದರೂ ಅರಣ್ಯ ಪ್ರದೇಶದಲ್ಲಿ ಆನೆ ಹಾಗೂ ಇತರ ಕಾಡುಪ್ರಾಣಿಗಳ ಚಲನವಲನ ಹೆಚ್ಚಿರುವುದರಿಂದ, ಭಕ್ತರು ಅತ್ಯಂತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಇನ್ನು ಮುಂದೆ ಪಾದಯಾತ್ರೆಗೆ ಬರುವ ಭಕ್ತರು ಗುಂಪು ಗುಂಪಾಗಿ ತೆರಳಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರು ಜಿಲ್ಲಾಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ತಮ್ಮ ಸುರಕ್ಷತೆಯ ಜೊತೆಗೆ ಇತರರ ಜೀವಕ್ಕೂ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Exit mobile version