ಮೈಸೂರು: ಮೈಸೂರು ಅರಮನೆಯ ಮುಂಭಾಗ ಭೀಕರ ದುರಂತವೊಂದು ಸಂಭವಿಸಿದ್ದು, ನೈಟ್ರೋಜನ್ ಗ್ಯಾಸ್ ಸ್ಫೋಟದಿಂದ (Nitrogen Gas Blast) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅರಮನೆ ಮುಂಭಾಗದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಗ್ಯಾಸ್ ತುಂಬುವ ಸಂದರ್ಭ ನೈಟ್ರೋಜನ್ ಸಿಲಿಂಡರ್ ಅಚಾನಕ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಭೀಕರವಾಗಿದ್ದು, ಸ್ಥಳದಲ್ಲಿದ್ದವರ ದೇಹ ಭಾಗಗಳು ಛಿದ್ರ ಛಿದ್ರಗೊಂಡಿವೆ. ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಈ ದುರಂತ ಸ್ಥಳದಲ್ಲಿದ್ದ ಇನ್ನೂ ನಾಲ್ವರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮೈಸೂರು ಕೆ.ಆರ್. ಆಸ್ಪತ್ರೆ (KR Hospital)ಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಕ್ಷಣದಲ್ಲಿ ಅರಮನೆ ಆವರಣದಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದರಿಂದ ಕೆಲಕಾಲ ಗೊಂದಲ ಮತ್ತು ಭಯದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲಿಸುತ್ತಿದ್ದಾರೆ.





