ಬೆಂಗಳೂರು, ನವೆಂಬರ್ 10: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ‘ರಾಜಾತಿಥ್ಯ’ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಇಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದೆದುರು ಘೋಷಣೆಗಳನ್ನ ಕೂಗಿ ಪ್ರತಿಭಟನೆ ಮಾಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದರು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ನಾಯಕರನ್ನು ವಶಕ್ಕೆ ಪಡೆದು, ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು.
ಪ್ರತಿಭಟನೆಯು ಬೆಂಗಳೂರಿನ ಶಿವಾನಂದ್ ಸರ್ಕಲ್‌ನಿಂದ ಆರಂಭವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಎಂಎಲ್‌ಸಿ ಸಿ.ಟಿ. ರವಿ, ಶಾಸಕ ಎನ್. ರವಿಕುಮಾರ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ‘ಕಾರಾಗೃಹದಲ್ಲಿ ಐಷಾರಾಮಿ ಜೀವನ!’, ‘ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಆಳ!’, ‘ಸಿದ್ದರಾಮಯ್ಯ ರಾಜೀನಾಮೆ ನೀಡಿ!’ ಎಂಬ ಘೋಷಣೆಗಳೊಂದಿಗೆ ಮೆರವಣಿಗೆ ಸಾಗಿತು. ಕೈದಿಗಳಿಗೆ ವಿಶೇಷ ಆಹಾರ, ಮೊಬೈಲ್ ಫೋನ್, ಇಂಟರ್ನೆಟ್ ಸೌಲಭ್ಯ, ಐಷಾರಾಮಿ ಕೊಠಡಿಗಳು ನೀಡಲಾಗುತ್ತಿದೆ ಎಂಬ ಆರೋಪಗಳನ್ನು ಬಿಜೆಪಿ ಮುಂದಿಟ್ಟಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿವೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಖ್ಯಾತ ಅಪರಾಧಿಗಳು ಮತ್ತು ರಾಜಕೀಯ ಆರೋಪಿಗಳು ಜೈಲಿನೊಳಗೇ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ವರದಿಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದೆ. ಸಾಮಾನ್ಯ ಖೈದಿಗಳು ಕಷ್ಟಪಡುತ್ತಿರುವಾಗ, ಶಕ್ತಿಶಾಲಿ ಆರೋಪಿಗಳಿಗೆ ವಿಶೇಷ ಸೌಲಭ್ಯಗಳು ಏಕೆ ? ಎಂದು ವಿಜಯೇಂದ್ರ ಪ್ರಶ್ನಿಸಿದರು.
ಮೆರವಣಿಗೆಯು ಸಿ.ಎಂ. ನಿವಾಸದ ಕಡೆಗೆ ಸಾಗುತ್ತಿದ್ದಂತೆಯೇ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು. ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಪ್ರಮುಖ ನಾಯಕರನ್ನು ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ ಅವರನ್ನು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧಿಸಲಾಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಹಿಂಸಾತ್ಮಕ ಘಟನೆ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಈ ಘಟನೆಯನ್ನು ಸರ್ಕಾರದ ದಬ್ಬಾಳಿಕೆ ಎಂದು ಕರೆದು, ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ, ಕಾಂಗ್ರೆಸ್ ನಾಯಕರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಬಿಜೆಪಿ ಗಮನ ಬೇರೆಡೆ ಸೆಳೆಯಲು ರಾಜಕೀಯ ನಾಟಕ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಜೈಲು ಅಧಿಕಾರಿಗಳು, ಕೈದಿಗಳು ಮತ್ತು ಕೆಲವು ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ಪರಿಶೀಲಿಸಲಾಗುತ್ತಿದೆ. ಬಿಜೆಪಿ ಈ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಬೇಕು ಎಂದು ಒತ್ತಾಯಿಸಿದೆ. ರಾಜ್ಯ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿದೆ.
