ಇಂದು ಸಿಲಿಕಾನ್ ಸಿಟಿಯಲ್ಲಿ ಹಳದಿ ಮೆಟ್ರೋ, 3 ವಂದೇ ಭಾರತ್ ರೈಲು ಸಂಚಾರಕ್ಕೆ ಮೋದಿ ಚಾಲನೆ

Untitled design 2025 08 10t071218.863

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಿ, ನಗರದ ಮೆಟ್ರೋ ವಿಸ್ತರಣೆ ಮತ್ತು ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆ, ಮೆಟ್ರೋದ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಮತ್ತು ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.  

ಇಂದು ಬೆಳಿಗ್ಗೆ 10:55ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೇಖಿ ಸರ್ಕಲ್ ಬಳಿಯ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ತೆರಳಲಿದ್ದಾರೆ. 11:15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಆಗಮಿಸಿ, ದೇಶಾದ್ಯಂತ ಚಾಲನೆಗೊಳ್ಳಲಿರುವ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇವುಗಳಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಕೂಡ ಸೇರಿದೆ.

11:30ಕ್ಕೆ ರೈಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ, ಅರ್.ವಿ. ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿ ಬೆಂಗಳೂರು ಮೆಟ್ರೋದ ಹೊಸ ಹಳದಿ ಮಾರ್ಗಕ್ಕೆ ಚಾಲನೆ ನೀಡಿ, ಆ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಳದಿ ಮಾರ್ಗವು ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ವಿಸ್ತರಿಸಿದ್ದು, ಐಟಿ ಕಾರಿಡಾರ್‌ನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

12:55ಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಕೇಂದ್ರದ ಸಭಾಂಗಣಕ್ಕೆ ಆಗಮಿಸಲಿರುವ ಮೋದಿ, ಒಂದು ಗಂಟೆಯ ಕಾರ್ಯಕ್ರಮದಲ್ಲಿ ಬೆಂಗಳೂರು ಮೆಟ್ರೋದ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯು ನಗರದ ಸಾರಿಗೆ ಜಾಲವನ್ನು ಇನ್ನಷ್ಟು ವಿಸ್ತರಿಸಲಿದ್ದು, ಹೆಚ್ಚಿನ ಪ್ರದೇಶಗಳನ್ನು ಮೆಟ್ರೋ ಸಂಪರ್ಕದೊಂದಿಗೆ ಜೋಡಿಸಲಿದೆ.

ಕಾರ್ಯಕ್ರಮದ ಬಳಿಕ, ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ, ದೆಹಲಿಗೆ ಮರಳಲಿದ್ದಾರೆ. ಈ ಭೇಟಿಯು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಆಧುನೀಕರಣಕ್ಕೆ ಒಂದು ಪ್ರಮುಖ ಹೆಜ್ಜೆಯಾಗಿದ್ದು, ನಗರದ ಜನರಿಗೆ ಉತ್ತಮ ಸಂಪರ್ಕ ಮತ್ತು ಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮದ ವೇಳಾಪಟ್ಟಿ

Exit mobile version