ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ರಾಜ್ಯದ ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಗಣ್ಯರು ಆತ್ಮೀಯ ಸ್ವಾಗತ ಕೋರಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10 ಗಂಟೆ 5 ನಿಮಿಷಕ್ಕೆ ವಿಶೇಷ ವಿಮಾನದ ಮೂಲಕ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಯನ್ನು ಸ್ವಾಗತಿಸಿದರು. ರಾಜ್ಯಪಾಲರಾದ ಸುಧಾ ಯಾದವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ಪ್ರಧಾನಿಗೆ ಸ್ವಾಗತ ಕೋರಿದರು. ಬಿಜೆಪಿ ಶಾಸಕರಾದ ಎಸ್. ರಘು, ಮುನಿರತ್ನ ಸೇರಿದಂತೆ ಹಲವು ನಾಯಕರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
₹15,600 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಕರ್ನಾಟಕ ಪ್ರವಾಸದಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳು ನಿಗದಿಯಾಗಿವೆ. ರಾಜ್ಯದಲ್ಲಿ ಒಟ್ಟು ₹15,600 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೂಲಸೌಕರ್ಯ, ಸಾರಿಗೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ಮೊದಲಿಗೆ ಬೆಂಗಳೂರಿನ ಜಿಗಣಿಯಲ್ಲಿರುವ ಪ್ರಶಾಂತಿ ಕುಟೀರಂನಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಒಂದು ಭಾಗವನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರಿಗೆ ಪಿಂಕ್ ಮೆಟ್ರೋ ಕೊಡುಗೆ
ಬೆಂಗಳೂರು ಮೆಟ್ರೋ ಪ್ರಯಾಣಿಕರ ಬಹುದಿನಗಳ ನಿರೀಕ್ಷೆಯಾಗಿರುವ ಪಿಂಕ್ ಲೈನ್‌ನ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಸುಮಾರು 7.5 ಕಿಲೋಮೀಟರ್ ಉದ್ದದ ಮಾರ್ಗವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಈ ಮಾರ್ಗದ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ಅದೇ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರೂ ಪ್ರಧಾನಿಯೊಂದಿಗೆ ಮೆಟ್ರೋ ಪ್ರಯಾಣದಲ್ಲಿ ಭಾಗಿಯಾಗಲಿದ್ದಾರೆ. ತಾವರೆಕೆರೆ ನಿಲ್ದಾಣದಿಂದ ಐಐಎಂಬಿ (IIMB) ಮೆಟ್ರೋ ನಿಲ್ದಾಣದವರೆಗೆ ಈ ಪ್ರಯಾಣ ನಡೆಯಲಿದೆ.
ನಂತರ ಐಐಎಂಬಿ ಆಡಿಟೋರಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ
ಬೆಂಗಳೂರಿನ ಕಾರ್ಯಕ್ರಮಗಳ ಬಳಿಕ ಪ್ರಧಾನಿ ಮೋದಿ ಅವರು ಮತ್ತೊಂದು ಮಹತ್ವದ ಸಾರಿಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ರೈಲಿಗೆ ಮಧ್ಯಾಹ್ನ ಚಾಲನೆ ನೀಡಲಿದ್ದಾರೆ.
ವಂದೇ ಭಾರತ್ ರೈಲು ಸೇವೆಯ ಆರಂಭವು ವೇಗದ ಮತ್ತು ಆಧುನಿಕ ರೈಲು ಪ್ರಯಾಣವನ್ನು ಬಯಸುವ ಪ್ರಯಾಣಿಕರಿಗೆ ಮಹತ್ವದ ಕೊಡುಗೆಯಾಗಲಿದೆ. ಬೆಂಗಳೂರು, ಮಂಗಳೂರು ಹಾಗೂ ಮಡಗಾಂವ್ ನಡುವಿನ ಸಂಪರ್ಕ ಸುಧಾರಣೆಗೆ ಈ ಸೇವೆ ಸಹಕಾರಿಯಾಗಲಿದೆ.





