ಮೈಸೂರು, ಜುಲೈ 28: ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಅವರು ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ನಿರ್ಮಾಣಗೊಂಡಿರುವ ಈ ಸ್ಮಾರಕವನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ.
45 ಕೋಟಿ ಸ್ಮಾರಕದ ವೈಶಿಷ್ಟ್ಯಗಳು
ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದೆ. ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಿದ ಬಳಿಕ ಮೊದಲು ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮಕ್ಕೆ ತೆರಳಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.
ರಾಮಕೃಷ್ಣ ಆಶ್ರಮದಲ್ಲಿ ವಿಶೇಷ ಕಾರ್ಯಕ್ರಮ
ರಾಮಕೃಷ್ಣ ಆಶ್ರಮದ ಆಡಿಟೋರಿಯಂನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಸುಮಾರು 30 ನಿಮಿಷಗಳ ಕಾಲ ಆಶ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಗಣ್ಯರ ಸಮ್ಮುಖ
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಂಸದ ಯದುವೀರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆಯಲ್ಲಿ ಕೆಲವೇ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ವಿಶೇಷ ಕಾಣಿಕೆಗಳು
ಈ ಸಂದರ್ಭದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲಾಗುತ್ತದೆ. ಜೊತೆಗೆ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ವಿಶೇಷ ನೆನಪಿನ ಕಾಣಿಕೆಯನ್ನೂ ಪ್ರಧಾನಿಗೆ ಅರ್ಪಿಸಲಾಗುತ್ತದೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ವಿಶೇಷ ಪಾಸ್ ವಿತರಿಸಲಾಗುತ್ತದೆ. ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಪ್ರಧಾನಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಪೊಲೀಸ್ ಇಲಾಖೆಯಿಂದ ವಿಶೇಷ ತಯಾರಿಗಳು ನಡೆಯುತ್ತಿವೆ.
ಮೋದಿಯವರ ಮೂರನೇ ಕರ್ನಾಟಕ ಭೇಟಿ
ಮೇ 10 ರಂದು ಪ್ರಧಾನಿ ಮೋದಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ ಹಾಗೂ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮತ್ತೊಮ್ಮೆ ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ. ಈ ಮೂಲಕ 2026ರಲ್ಲಿ ಪ್ರಧಾನಿ ಮೋದಿಯವರ ಇದು ಮೂರನೇ ಕರ್ನಾಟಕ ಭೇಟಿಯಾಗಲಿದೆ.
