ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು ಹಾಗೂ ಮೈಸೂರಿನೊಂದಿಗೆ ಅವರ ಐತಿಹಾಸಿಕ ನಂಟನ್ನು ಸ್ಮರಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಈ ಸ್ಮಾರಕದ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಆಡಳಿತ ಯಂತ್ರ, ಪೊಲೀಸ್ ಇಲಾಖೆ ಹಾಗೂ ರಾಮಕೃಷ್ಣ ಆಶ್ರಮದ ವತಿಯಿಂದ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 2.55ಕ್ಕೆ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 3.15ಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿದ್ದು, ಬಳಿಕ ರಸ್ತೆ ಮಾರ್ಗವಾಗಿ 3.25ಕ್ಕೆ ವಿವೇಕ ಸ್ಮಾರಕದತ್ತ ಪ್ರಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 3.30ರಿಂದ ಸಂಜೆ 5.15ರವರೆಗೆ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಇದೇ ವೇಳೆ ಬಹುನಿರೀಕ್ಷಿತ ‘ವಿವೇಕ ಸ್ಮಾರಕವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ರಾಮಕೃಷ್ಣ ಮಠದ ಹಿರಿಯ ಸ್ವಾಮೀಜಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ಲೋಕಾರ್ಪಣೆ ಕಾರ್ಯಕ್ರಮದ ನಂತರ ಸಂಜೆ 5.20ಕ್ಕೆ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಓವಲ್ ಮೈದಾನಕ್ಕೆ ವಾಪಸ್ ತೆರಳಿ, ಅಲ್ಲಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದತ್ತ ಪ್ರಯಾಣಿಸಲಿದ್ದಾರೆ. ಸಂಜೆ 5.55ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಮರಳಲಿದ್ದಾರೆ.
ಸ್ವಾಮಿ ವಿವೇಕಾನಂದರು ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ಮೈಸೂರಿಗೆ ಭೇಟಿ ನೀಡಿ ಇಲ್ಲಿನ ರಾಜವಂಶ ಹಾಗೂ ಸಮಾಜದೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಅವರ ಆ ಐತಿಹಾಸಿಕ ಭೇಟಿಯ ನೆನಪನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಮಕೃಷ್ಣ ಆಶ್ರಮದಲ್ಲಿ ಈ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದೆ. ಯುವಜನತೆಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು, ದೇಶಭಕ್ತಿ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಪರಿಚಯಿಸುವ ಪ್ರಮುಖ ಕೇಂದ್ರವಾಗುವ ನಿರೀಕ್ಷೆ ಈ ಸ್ಮಾರಕದ ಮೇಲಿದೆ.
ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಮಾನ ನಿಲ್ದಾಣ, ಓವಲ್ ಮೈದಾನ, ರಾಮಕೃಷ್ಣ ಆಶ್ರಮ ಸೇರಿದಂತೆ ಪ್ರಧಾನಿ ಸಂಚರಿಸಲಿರುವ ಮಾರ್ಗಗಳಲ್ಲೆಲ್ಲ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಂಚಾರ ವ್ಯವಸ್ಥೆಯಲ್ಲೂ ಅಗತ್ಯ ಬದಲಾವಣೆಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ಭೇಟಿ ಹಾಗೂ ವಿವೇಕ ಸ್ಮಾರಕದ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
