ಜಾತಿ ನಿಂದನೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲು

ಅಲರ್ಟ್ (2)

ಮೈಸೂರು: ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಶೋಭಾಯಾತ್ರೆ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿರುವುದು, ಜಾತಿ ಮತ್ತು ಧರ್ಮಗಳ ನಡುವೆ ದ್ವೇಷಕ್ಕೆ ಉತ್ತೇಜನ ನೀಡಿರುವುದು ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಟಿ. ನರಸೀಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮಸೀದಿ ಮುಂಭಾಗ ಮೆರವಣಿಗೆ ಸಾಗುವ ಸಂದರ್ಭದಲ್ಲಿ ಪಟಾಕಿ ಸಿಡಿಸದಂತೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಚನೆ ನೀಡಿದ್ದರು ಎನ್ನಲಾಗಿದೆ.

ಆದರೆ, ಈ ಸೂಚನೆಗಳ ನಡುವೆಯೇ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ನಡೆಸಲಾಯಿತು. ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ನಡೆದ ಈ ಯಾತ್ರೆ ವೇಳೆ ಕೆಲವೊಂದು ಘೋಷಣೆಗಳು ಮತ್ತು ಭಾಷಣಗಳು ವಿವಾದಕ್ಕೆ ಕಾರಣವಾಗಿವೆ ಎಂದು ಪೊಲೀಸರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಸೀದಿ ಮುಂಭಾಗ ಭಾಷಣ

ಶೋಭಾಯಾತ್ರೆಯು ಲಿಂಕ್ ರಸ್ತೆಯಲ್ಲಿರುವ ಮಸೀದಿ ಮುಂಭಾಗದಿಂದ ಸಾಗುತ್ತಿದ್ದ ಸಂದರ್ಭದಲ್ಲಿ ಧ್ವನಿವರ್ಧಕ ಅಳವಡಿಸಿದ್ದ ವಾಹನದ ಮೇಲೆ ನಿಂತು ಪ್ರತಾಪ್ ಸಿಂಹ ಮಾತನಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದಲ್ಲದೆ, ಸೌಹಾರ್ದ ಯಾತ್ರೆ ನಡೆಸಿದ್ದ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡರು ಹಾಗೂ ನೀಲಿ ಶಾಲು ಧರಿಸಿದ್ದವರ ವಿರುದ್ಧವೂ ಪ್ರತಾಪ್ ಸಿಂಹ ಕಟುವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಮೊದಲು ಓದಿಕೊಳ್ಳಬೇಕು ಎಂಬ ರೀತಿಯ ಹೇಳಿಕೆಗಳನ್ನು ನೀಡಿರುವುದರಿಂದ ಜಾತಿ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಎಫ್‌ಐಆರ್‌ನಲ್ಲಿ ಹಲವು ಆರೋಪಗಳು

ನಿಗದಿತ ಸಮಯಕ್ಕಿಂತ ಹೆಚ್ಚಿನ ಅವಧಿಗೆ ಮೆರವಣಿಗೆ ನಡೆಸಿರುವುದು, ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿರುವುದು, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ಹಾಗೂ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿರುವ ಆರೋಪಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 132, 191, 194, 196(1)(a)(b), 299 ಹಾಗೂ 353(1)(b)(c) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

 

Exit mobile version