ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

Untitled design 2026 06 20T115319.957

ಬೆಂಗಳೂರು (ಜೂನ್‌20): ರಾಜ್ಯದ ಹಿತಾಸಕ್ತಿಗೆ ಪೂರಕವಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಕುರಿತು ಮಾತನಾಡಿದ ಅವರು, ಎರಡು ಇಲಾಖೆಗಳ ಪ್ರಸ್ತಾವನೆಗಳು ಸಚಿವ ಸಂಪುಟಕ್ಕೆ ಬಂದ ಬಳಿಕ ಸಿಎಂ ಡಿಕೆ ಶಿವಕುಮಾರ್ ಅವರ ಸಂಕಲ್ಪ ಏನಿದೆಯೋ ಅದನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ರಿಷಬ್ ಶೆಟ್ಟಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ರಾಜ್ಯದಲ್ಲಿ ಆರ್ಥಿಕ ಸ್ಥಿರತೆ ಕಾಪಾಡುವುದು, ಹೆಚ್ಚಿನ ಬಂಡವಾಳ ಹೂಡಿಕೆ ಆಕರ್ಷಿಸುವುದು ಹಾಗೂ ಉದ್ಯೋಗ ಸೃಷ್ಟಿ ಮಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಐಟಿ-ಬಿಟಿ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು.

 ಜನಸ್ಪಂದನಾ ಕಾರ್ಯಕ್ರಮಕ್ಕೆ ಹೊಸ ರೂಪ

ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಸಣ್ಣ ಸಮಸ್ಯೆಗಳಿಗೆ ಜನರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗಳನ್ನು ಕಾಯುವ ಅಗತ್ಯವಿಲ್ಲ. ಸ್ಥಳೀಯ ಮುಖಂಡರ ಮೂಲಕವೇ ಪರಿಹಾರ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಲ್ಲಿ ತಪ್ಪಿಲ್ಲ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ಕಾರದ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಮುಖ್ಯಮಂತ್ರಿಗಳ ಧ್ಯೇಯವಾಗಿದೆ ಎಂದರು. ಕೆಲವು ಸೌಲಭ್ಯಗಳು ಅನರ್ಹರಿಗೆ, ಹೊರರಾಜ್ಯದವರಿಗೆ ಹಾಗೂ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ತಲುಪುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಲೋಪಗಳನ್ನು ಸರಿಪಡಿಸಿ ಅರ್ಹರಿಗೆ ಮಾತ್ರ ಯೋಜನೆ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಡದಿ ಟೌನ್‌ಶಿಪ್‌ಗೆ ರೈತರ ಒಪ್ಪಿಗೆ ಇದೆ

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಸುಮಾರು 7,500 ಎಕರೆ ಪ್ರದೇಶದಲ್ಲಿ 6 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಗೆ ರೈತರು ಒಪ್ಪಿಗೆ ನೀಡಿದ್ದಾರೆ. ಉಳಿದ ಭೂಮಿಯ ಪ್ರಮಾಣ ಸುಮಾರು 1,300 ಎಕರೆ ಇರಬಹುದು ಎಂದು ತಿಳಿಸಿದರು. ಯಾವುದೇ ರೀತಿಯ ದಬ್ಬಾಳಿಕೆ ನಡೆಸಿಲ್ಲ. ಚನ್ನರಾಯಪಟ್ಟಣದಲ್ಲಿ ರೈತರು ವಿರೋಧ ವ್ಯಕ್ತಪಡಿಸಿದಾಗ ಸರ್ಕಾರ ಯೋಜನೆಯನ್ನು ಹಿಂಪಡೆದಿತ್ತು. ಈಗ ರೈತರು ಸ್ವಯಂಪ್ರೇರಿತರಾಗಿ ಭೂಮಿ ನೀಡಲು ಮುಂದೆ ಬಂದಿದ್ದಾರೆ. ಕಾನೂನು ಚೌಕಟ್ಟನ್ನು ಮೀರಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದರು.

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ನಡೆಸಲಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಅವರು ಪಾದಯಾತ್ರೆ ಮಾಡಲಿ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಬೆಂಗಳೂರಿನಲ್ಲಿ 15 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯುತ್ತಿದೆ. ಬಿಡಿಎ ಮತ್ತು ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಮಂದಿ ಈ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎಂದರು.

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವದ ವಿರುದ್ಧ ಅಸಮಾಧಾನ ಹೊಂದಿದ್ದ ಶಾಸಕರೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಯಾವುದೇ ಆಮಿಷ ಒಡ್ಡಿಲ್ಲ. ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನವೇ ಇದಕ್ಕೆ ಕಾರಣ ಎಂದರು.

ವೋಟ್ ಚೋರಿ ಪ್ರಕರಣದ ಕುರಿತು ಈಗಾಗಲೇ 22 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬಿಜೆಪಿ ಮಾಜಿ ಶಾಸಕ ಮತ್ತು ಅವರ ಪುತ್ರರ ವಿರುದ್ಧ ದೂರು ದಾಖಲಾಗಿದೆ. ಆಪರೇಷನ್ ಕಮಲದ ಮೂಲಕ ಸರ್ಕಾರಗಳನ್ನು ಉರುಳಿಸುವ ರಾಜಕೀಯವನ್ನು ದೇಶಕ್ಕೆ ಪರಿಚಯಿಸಿದವರು ಬಿಜೆಪಿಯೇ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಕ್ರಾಸ್ ಮತದಾನದ ಕುರಿತು ದೆಹಲಿಗೆ ವರದಿ ನೀಡಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಯವಿಟ್ಟು ದೆಹಲಿಗೆ ಹೋಗಬೇಡಿ, ಹೋದರೆ ರಾಜೀನಾಮೆ ಕೇಳಬಹುದು ಎಂದು ವ್ಯಂಗ್ಯವಾಡಿದರು.

 

Exit mobile version