ಬೆಂಗಳೂರು: ಸಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಸಕ್ರಿಯರಾಗಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ 22 ವರ್ಷೀಯ ದಿನೇಶ್ ನರೋಣ ಎಂಬ ಯುವಕ ಸಚಿವರಿಗೆ ಬೆದರಿಕೆ ಕರೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಕರೆಯ ವಿಡಿಯೋವನ್ನು ಹಂಚಿಕೆ ಮಾಡಿದ್ದರು. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರಲ್ಲಿ, ಆರ್‌ಎಸ್‌ಎಸ್, ಯುವಕರ ಮನಸ್ಸಿನಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ. ಕೆಲವು ದಿನಗಳಿಂದ ನಿರಂತರ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿವೆ ಎಂದು ತಿಳಿಸಿದ್ದರು.
ಸಚಿವರ ದೂರಿನ ಪ್ರಕಾರ, ಬೆಂಗಳೂರು ಕಲಬುರಗಿ ಪೊಲೀಸರು ಮಹಾರಾಷ್ಟ್ರ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಬೆದರಿಕೆ ಕರೆ ನೀಡಿದ ಸಂಭಾಷಣೆಯ ಆಡಿಯೋ ಕ್ಲಿಪ್ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ತಮ್ಮ ಪೋಸ್ಟ್ನಲ್ಲಿ, ನನ್ನದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಎಸ್ ಪಸರಿಸುತ್ತಿರುವ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ. ಮುಗ್ಧ ಯುವ ಸಮುದಾಯವನ್ನು ವಿಷದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಮಾಡುತ್ತೇನೆ ಎಂದು ಹೇಳಿದ್ದಾರೆ.