ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗೋಲಪಲ್ಲಿ ಗ್ರಾಮದ ಬಳಿ ದೇವದುರ್ಗ ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ್ ಅವರ ಕಾರು ಅಪಘಾತಕ್ಕೀಡಾಗಿದೆ. ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ರಸ್ತೆ ಪಕ್ಕದ ಬೆಟ್ಟಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸದಿಂದ ಕಾರಿನ ಮುಂಭಾಗ ಜಖಂಗೊಂಡಿದೆ.
ಶಾಸಕಿ ಕರೆಮ್ಮ ನಾಯಕ್ ಅವರಿಗೆ ಈ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಶಾಸಕಿಯನ್ನು ಲಿಂಗಸಗೂರು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ ಮತ್ತು ಸದ್ಯ ಅವರು ಆರೋಗ್ಯವಾಗಿದ್ದಾರೆ.ಈ ಘಟನೆ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕಿಯ ಆರೋಗ್ಯ ವಿಚಾರಿಸಲು ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿದ್ದಾರೆ.





