ಬೆಂಗಳೂರು (ಆ. 12): ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ರನ್ಯಾ ರಾವ್ ಪರ ವಕೀಲ ವೈ.ಎಲ್. ಮಹೇಶ್ ವಾದ ಮಂಡಿಸಿ, 2025ರ ಜುಲೈ 15ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸಿಐಎಸ್‌ಎಫ್ ಕಮಾಂಡೆಂಟ್ ಸರಿಯಾಗಿ ಪಾಲಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಹೀಗಾಗಿ, 2025ರ ಮಾರ್ಚ್ 3ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲಾಗಿರುವ ಸ್ಪಷ್ಟ ಹಾಗೂ ಅಗತ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ಸಿಐಎಸ್‌ಎಫ್‌ಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಯಾಗಿ ಸಿಐಎಸ್‌ಎಫ್ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದರು. ನ್ಯಾಯಾಲಯದ ಹಿಂದಿನ ಆದೇಶವನ್ನು ಸಿಐಎಸ್‌ಎಫ್ ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಗೊಂದಲ ಉಂಟಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅರ್ಜಿದಾರರು ಎರಡು ದಿನಗಳ ಬಳಿಕ ಸಿಐಎಸ್‌ಎಫ್ ಅಧಿಕಾರಿಗಳನ್ನು ಸಂಪರ್ಕಿಸಿದರೆ, 2025ರ ಮಾರ್ಚ್ 3ರ ಸಂಜೆ 4.30ರಿಂದ ಮಾರ್ಚ್ 4ರ ಬೆಳಗ್ಗೆ 11 ಗಂಟೆಯವರೆಗೆ ಸಂಗ್ರಹಿಸಲಾಗಿರುವ ಸಂಬಂಧಿತ ವಿಡಿಯೋ ದೃಶ್ಯಾವಳಿಗಳನ್ನು ನೀಡುವುದಾಗಿ ಎಎಸ್‌ಜಿ ಅರವಿಂದ್ ಕಾಮತ್ ನ್ಯಾಯಾಲಯಕ್ಕೆ ತಿಳಿಸಿದರು.
ಸಿಐಎಸ್‌ಎಫ್ ಪರ ವಕೀಲರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್, ಅರ್ಜಿದಾರರಿಗೆ ಅಗತ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಿ ವಿಚಾರಣೆಯನ್ನು ಮುಕ್ತಾಯಗೊಳಿಸಿತು.
ರನ್ಯಾ ರಾವ್ ಪ್ರಕರಣದ ಹಿನ್ನೆಲೆ
ದುಬೈನಿಂದ ಅಕ್ರಮವಾಗಿ 14.2 ಕೆ.ಜಿ. ಚಿನ್ನವನ್ನು, ಸುಮಾರು 12.56 ಕೋಟಿ ರೂಪಾಯಿ ಮೌಲ್ಯದಲ್ಲಿ, ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು 2025ರ ಮಾರ್ಚ್ 3ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು.
ನಂತರ ಡಿಆರ್‌ಐ ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರಿಗೆ ಡೀಫಾಲ್ಟ್ ಜಾಮೀನು ದೊರೆತಿತ್ತು. ಆದರೆ, ಕಾಫೀಪೋಸಾ ಕಾಯ್ದೆಯಡಿ ಬಂಧನದಲ್ಲಿದ್ದ ಕಾರಣ ಅವರು ತಕ್ಷಣ ಜೈಲಿನಿಂದ ಬಿಡುಗಡೆಯಾಗಿರಲಿಲ್ಲ.
ಸುಮಾರು ಒಂದು ವರ್ಷದ ಬಂಧನದ ಬಳಿಕ 2026ರ ಏಪ್ರಿಲ್‌ನಲ್ಲಿ ರನ್ಯಾ ರಾವ್ ಬಿಡುಗಡೆಯಾಗಿದ್ದರು
ಚಿನ್ನ ಕಳ್ಳಸಾಗಣೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಬಂಧನಕ್ಕೊಳಗಾದ ಬಳಿಕ ಪ್ರಕರಣದ ತನಿಖೆ ಹಲವು ಹಂತಗಳಲ್ಲಿ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳು ಪ್ರಮುಖ ಸಾಕ್ಷ್ಯವಾಗಬಹುದು ಎಂಬ ಹಿನ್ನೆಲೆಯಲ್ಲಿ ಅವುಗಳನ್ನು ಪಡೆಯಲು ಹೈಕೋರ್ಟ್ ಮೊರೆ ಹೋಗಲಾಗಿತ್ತು.
ಇದೀಗ ನ್ಯಾಯಾಲಯದ ನಿರ್ದೇಶನದಂತೆ 2025ರ ಮಾರ್ಚ್ 3ರ ಸಂಜೆ 4.30ರಿಂದ ಮಾರ್ಚ್ 4ರ ಬೆಳಗ್ಗೆ 11ರವರೆಗಿನ ಸಂಬಂಧಿತ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಬೆಳವಣಿಗೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆದುಕೊಳ್ಳುವ ಸಾಧ್ಯತೆಯಿದೆ.





