ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೆ ಆತಂಕ ಎದುರಾಗಿದೆ. ಪ್ರಕರಣದ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕುರಿತು ನ್ಯಾಯಾಲಯದ ಬೆಳವಣಿಗೆಗಳು ಕುತೂಹಲ ಮೂಡಿಸಿದ್ದು, ಇಂದು ಅವರ ಸಾಕ್ಷಿ ಹೇಳಿಕೆ ದಾಖಲಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಹೆಚ್ ನ್ಯಾಯಾಲಯ ಈ ಹಿಂದೆ ಅಂಗೀಕರಿಸಿತ್ತು. ಇದರ ಬೆನ್ನಲ್ಲೇ ಸೆಪ್ಟೆಂಬರ್ 2ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷಿ ಹೇಳಿಕೆ ದಾಖಲಿಸುವಂತೆ ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸಲಾಗಿತ್ತು.
ಪ್ರದೋಷ್ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ, ಜೈಲಾಧಿಕಾರಿಗಳ ಮೂಲಕ ಸಮನ್ಸ್ ಜಾರಿ ಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಸೂಚಿಸಿದ್ದರು. ಹೀಗಾಗಿ ಇಂದು ಪ್ರದೋಷ್ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡಿಯುತ್ತಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮತ್ತೊಂದೆಡೆ, ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್‌ನ ಆದೇಶವನ್ನು ರದ್ದುಪಡಿಸುವಂತೆ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ಇಂದು ಹೈಕೋರ್ಟ್‌ನ ವಿಚಾರಣಾ ಪಟ್ಟಿಯಲ್ಲಿ 49ನೇ ಮ್ಯಾಟರ್ ಆಗಿದೆ. ಹೀಗಾಗಿ ಬೆಳಗ್ಗೆ 11.30ರ ಸುಮಾರಿಗೆ ಈ ಅರ್ಜಿಗೆ ಸಂಬಂಧಿಸಿದಂತೆ ಆದೇಶ ಹೊರಬೀಳುವ ಸಾಧ್ಯತೆಯಿದೆ. ಹೈಕೋರ್ಟ್‌ನ ಆದೇಶ ಏನಾಗಲಿದೆ ಎಂಬುದರ ಮೇಲೆ ಪ್ರಕರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ಇದೇ ವೇಳೆ, ಸುಮಾರು ಮಧ್ಯಾಹ್ನ 12 ಗಂಟೆ ವೇಳೆಗೆ ಪ್ರದೋಷ್ ಅವರ ಸಾಕ್ಷಿ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಹೀಗಾಗಿ ಒಂದೆಡೆ ಹೈಕೋರ್ಟ್‌ನಲ್ಲಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಾಗೂ ಮತ್ತೊಂದೆಡೆ ಪ್ರದೋಷ್ ಅವರ ಸಾಕ್ಷಿ ಹೇಳಿಕೆ ದಾಖಲಾಗುವ ಪ್ರಕ್ರಿಯೆ ನಡೆಯಲಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.
ಪ್ರದೋಷ್ ಮಾಫಿ ಸಾಕ್ಷಿಯಾಗಿ ನೀಡಲಿರುವ ಹೇಳಿಕೆಯಲ್ಲಿ ಯಾವೆಲ್ಲ ಅಂಶಗಳು ಬಹಿರಂಗವಾಗಲಿವೆ? ಅವರ ಹೇಳಿಕೆ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಂಬ ಪ್ರಶ್ನೆಗಳು ಇದೀಗ ಮೂಡಿವೆ. ಹೀಗಾಗಿ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಡೆಯಲಿರುವ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.
