ಬೆಂಗಳೂರು: ಸಿಲಿಕಾನ್ ಸಿಟಿಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರೊಂದನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಕೃತ್ಯದಲ್ಲಿ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಅವರ ಐಷಾರಾಮಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ತಡರಾತ್ರಿ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಲ್ಯಾಂಬೊರ್ಗಿನಿ ಕಾರೊಂದು ಅತ್ಯಂತ ವೇಗವಾಗಿ ಬಂದು, ವೃತ್ತಾಕಾರವಾಗಿ ಸರಣಿ ಡ್ರಿಫ್ಟಿಂಗ್ (Drifting) ಮಾಡಿತ್ತು. ಜನನಿಬಿಡ ರಸ್ತೆಯಲ್ಲಿ ಸುಮಾರು ಎರಡರಿಂದ ಮೂರು ಬಾರಿ ಕಾರನ್ನು ರಸ್ತೆಯ ಮೇಲೆ ತಿರುಗಿಸಿ ಡ್ರಿಫ್ಟಿಂಗ್ ಮಾಡಲಾಗಿತ್ತು. ಈ ವೇಳೆ ಕಾರಿನ ಟೈರ್‌ಗಳಿಂದ ಹೊಗೆ ಏಳುತ್ತಿದ್ದುದು ಮತ್ತು ಭಯಾನಕ ಶಬ್ದ ಬರುತ್ತಿದ್ದುದು ರಸ್ತೆಯಲ್ಲಿದ್ದ ಇತರ ವಾಹನ ಸವಾರರಲ್ಲಿ ಆತಂಕ ಮೂಡಿಸಿತ್ತು. ಈ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕಿರುವ ಕಬ್ಬನ್ ಪಾರ್ಕ್ ಸಂಚಾರಿ ಠಾಣೆ ಪೊಲೀಸರು, ಕಾರಿನ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ತಕ್ಷಣವೇ ಲ್ಯಾಂಬೊರ್ಗಿನಿ ಕಾರನ್ನು ಪತ್ತೆಹಚ್ಚಿ ಸೀಜ್ ಮಾಡಿದ್ದಾರೆ. ಸದ್ಯ ಕಾರು ಪೊಲೀಸ್ ವಶದಲ್ಲಿದ್ದು, ವಾಹನದ ಅಧಿಕೃತ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಆರ್‌ಟಿಒ (RTO) ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕಾರನ್ನು ರಿಕ್ಕಿ ರೈ ಅವರೇ ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಿಕ್ಕಿ ರೈಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಬೇಜವಾಬ್ದಾರಿಯಿಂದ ವಾಹನ ಚಾಲನೆ ಮಾಡಿ ಇತರರ ಪ್ರಾಣಕ್ಕೆ ಅಪಾಯ ತಂದೊಡ್ಡಿದ ಆರೋಪದಡಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.