ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಬಳ್ಳಾರಿಯ ಸಂಡೂರು ತಾಲೂಕಿನ ಕಾಳಿಂಗೇರಿ ಗ್ರಾಮದಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ. ಸಹಿಪ್ರಾ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ (12) ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ.
ಎಂದಿನಂತೆ ಶಾಲೆಗೆ ತೆರಳಲು ಸಿದ್ಧತೆಯಲ್ಲಿದ್ದ ದೀಕ್ಷಾ, ಮನೆಯಲ್ಲಿ ತಲೆ ಬಾಚಿಕೊಳ್ಳುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಪಿಎಚ್‌ಸಿ) ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಆಕೆಯ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಸಂಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ದುರಾದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮೊದಲೇ ದೀಕ್ಷಾ ಕೊನೆಯುಸಿರೆಳೆದಿದ್ದಾಳೆ.
ಈ ಘಟನೆಯ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೀಕ್ಷಾಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯನ್ನು ವೈದ್ಯರು ಶಂಕಿಸಿದ್ದಾರೆ. ಆದರೆ, ಇಷ್ಟು ಕಿರಿಯ ವಯಸ್ಸಿನ ಬಾಲಕಿಗೆ ಹೃದಯಾಘಾತ ಸಂಭವಿಸಿದ್ದು ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಸಂಡೂರು ಆಸ್ಪತ್ರೆಗೆ ಸ್ಥಳೀಯ ಶಾಸಕಿ ಅನ್ನಪೂರ್ಣ ತುಕಾರಾಂ, ತಹಸೀಲ್ದಾರ್ ಅನಿಲ್ ಕುಮಾರ್, ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಭೇಟಿ ನೀಡಿ, ಘಟನೆಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಸಕಿ ಅನ್ನಪೂರ್ಣ ತುಕಾರಾಂ, ದೀಕ್ಷಾಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯ ಮಾಡುವ ಭರವಸೆ ನೀಡಿದ್ದಾರೆ.





