ಬೆಂಗಳೂರು: ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗಿನಿಂದ ರಾಜ್ಯದ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿಯಾಗಿರುವ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಈ ದಾಳಿ ನಡೆದಿದೆ.
ಬೆಳಗಾವಿಯ ದೂರದರ್ಶನ ಕೇಂದ್ರದ ಆವರಣದಲ್ಲಿರುವ ವೈ. ಮಂಜುನಾಥ್ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಅಧಿಕಾರಿಗಳು ಪ್ರವೇಶಿಸಿ, ದಾಖಲೆಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. 10 ಕ್ಕೂ ಹೆಚ್ಚು ಅರೆಸೇನಾ ಪಡೆಯ ಭದ್ರತೆಯ ನಡುವೆ ಈ ಕಾರ್ಯಾಚರಣೆ ನಡೆಯುತ್ತಿದ್ದು, ಅಧಿಕಾರಿಗಳು ಸೂಕ್ಷ್ಮವಾಗಿ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಳಗಾವಿ ಜೊತೆಗೆ ಮೈಸೂರು, ಬೆಂಗಳೂರು, ಹಾಸನ ಜಿಲ್ಲೆಯ ಅರಸೀಕೆರೆ, ಅಥಣಿ ತಾಲೂಕಿನ ಐನಾಪುರ ಸೇರಿದಂತೆ ಆರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಮೈಸೂರಿನಲ್ಲಿರುವ ವೈ. ಮಂಜುನಾಥ್ ಅವರ ಸ್ನೇಹಿತೆಯ ಮನೆ, ಬೆಂಗಳೂರಿನ ಅಪಾರ್ಟ್ಮೆಂಟ್, ಅರಸೀಕೆರೆಯಲ್ಲಿರುವ ಆಪ್ತನ ಮನೆ ಮತ್ತು ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತನ ಮನೆ ಮೇಲೂ ಶೋಧ ಕಾರ್ಯಾಚರಣೆ ನಡೆದಿರುವ ಮಾಹಿತಿ ಲಭ್ಯವಾಗಿದೆ.
ವೈ. ಮಂಜುನಾಥ್ ಅವರು ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿದ್ದು, ಕಳೆದ ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೇನಾಮಿ ಹೆಸರಲ್ಲಿ ಭಾರಿ ಪ್ರಮಾಣದ ಜಮೀನು, ಬಾರ್, ರೆಸ್ಟೋರೆಂಟ್ ಸೇರಿದಂತೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯವು ಈ ಆರೋಪಗಳಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತನಿಖೆ ನಡೆಸುತ್ತಿದ್ದು, ಇದೀಗ ಶೋಧ ಕಾರ್ಯಾಚರಣೆಗೆ ಮುಂದಾಗಿದೆ.
ಸದ್ಯ ವೈ. ಮಂಜುನಾಥ್ ಅವರು ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲಿಯೂ ಜಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಆತನಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪವು ಗಂಭೀರ ಸ್ವರೂಪದ್ದಾಗಿದ್ದು, ಈ ಪ್ರಕರಣದಲ್ಲಿ ಮುಂದಿನ ತನಿಖೆ ಮುಂದುವರಿಯಲಿದೆ.
ಈ ಕಾರ್ಯಾಚರಣೆಯಿಂದ ಅಬಕಾರಿ ಇಲಾಖೆಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ವೈ. ಮಂಜುನಾಥ್ ಅವರ ಆಪ್ತರು, ಸಂಬಂಧಿಕರು ಮತ್ತು ಸಹೋದ್ಯೋಗಿಗಳ ನಡುವೆ ಆತಂಕ ಮನೆಮಾಡಿದೆ. ಜಾರಿ ನಿರ್ದೇಶನಾಲಯವು ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿ, ಅಕ್ರಮ ಆಸ್ತಿ ಸಂಪಾದನೆ ಪ್ರಮಾಣವನ್ನು ಅಂದಾಜು ಮಾಡಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.
