ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಮೌನ ವಹಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲೇ ಹೆಚ್ಚು ಸಮಯ ಕಳೆದಿರುವ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬ ಕುತೂಹಲ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೆಚ್ಚಾಗಿದೆ.
ಸಿದ್ದರಾಮಯ್ಯ ಅವರ ಮೌನದ ನಡುವೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರು, ಮುಖಂಡರು ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕಾರಣದಲ್ಲಿ ನೀವು ಇನ್ನೂ ಸಕ್ರಿಯವಾಗಿರಬೇಕು, ಪಕ್ಷದ ಸಂಘಟನೆಗೆ ನಿಮ್ಮ ನಾಯಕತ್ವ ಅಗತ್ಯವಿದೆ ಎಂದು ಅವರು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ನಾಯಕರು, “ನೀವು ಆ ಭಾಗದಲ್ಲಿ ಪ್ರವಾಸ ಕೈಗೊಳ್ಳದಿದ್ದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಬಹುದು. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಹಾಗೂ ಮತದಾರರನ್ನು ಒಗ್ಗೂಡಿಸಲು ನಿಮ್ಮ ಪ್ರವಾಸ ಅತ್ಯಗತ್ಯ” ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸಕ್ಕೆ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಇದರ ಜೊತೆಗೆ 2028ರ ವಿಧಾನಸಭೆ ಚುನಾವಣೆಯಲ್ಲಿಯೂ ನೀವು ಸ್ಪರ್ಧೆ ಮಾಡಬೇಕು ಎಂಬ ಸಲಹೆಯನ್ನು ಆಪ್ತರು ಹಾಗೂ ಬೆಂಬಲಿಗರು ನೀಡಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರು ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯಬಾರದು. ಪಕ್ಷಕ್ಕೆ ಇನ್ನೂ ಅವರ ನಾಯಕತ್ವದ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ಆಗಸ್ಟ್ ತಿಂಗಳಿನಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸವನ್ನು ಸಿದ್ದರಾಮಯ್ಯ ಆರಂಭಿಸುವ ಸಾಧ್ಯತೆ ಇದೆ. ಈ ಪ್ರವಾಸದ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತರನ್ನು ಒಗ್ಗೂಡಿಸುವ “ಅಹಿಂದ 2.0” ಪರಿಕಲ್ಪನೆಗೆ ಹೊಸ ಚೈತನ್ಯ ನೀಡುವ ಚರ್ಚೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ CM ಡಿ.ಕೆ. ಶಿವಕುಮಾರ್ ಹಾಗೂ ಹಲವು ನಾಯಕರು ಪ್ರತ್ಯೇಕವಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಷದ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಈ ಎಲ್ಲ ಬೆಳವಣಿಗೆಗಳ ಕುರಿತು ಸಿದ್ದರಾಮಯ್ಯ ಅವರು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡದೆ ಮೌನ ಮುಂದುವರಿಸಿದ್ದಾರೆ.
ಸದ್ಯ ಕಾಂಗ್ರೆಸ್ ವಲಯದಲ್ಲಿ ಒಂದೇ ಪ್ರಶ್ನೆ ಹೆಚ್ಚು ಕೇಳಿಬರುತ್ತಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆಯೇ? ಉತ್ತರ ಕರ್ನಾಟಕ ಪ್ರವಾಸ ಹಾಗೂ “ಅಹಿಂದ 2.0” ಮೂಲಕ ಅವರು ಮತ್ತೆ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆಯೇ? ಈ ಎಲ್ಲ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ನಡೆ ಉತ್ತರ ನೀಡಲಿದೆ.
