ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ..
ಇತ್ತೀಚೆಗೆ ಸ್ನೇಹಮಯಿ ಕೃಷ್ಣ ಅವರು ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂಬ ಆರೋಪ ಮಾಡಿದ್ದರು..ಈ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿತ್ತು.
ಈ ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಡಿ.ಬಿ. ನಟೇಶ್, ತಮ್ಮ ಮಾನಹಾನಿಗೆ ಕಾರಣವಾಗುವ ರೀತಿಯಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು.
ದೂರು ಸ್ವೀಕರಿಸಿದ ಬಳಿಕ ಪೊಲೀಸ್ ಆಯುಕ್ತರು ಸಂಬಂಧಿತ ಅಧಿಕಾರಿಗಳಿಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪರಿಶೀಲನೆ ಪ್ರಾರಂಭಿಸಲಾಯಿತು.
ತನಿಖೆಯ ಪ್ರಾಥಮಿಕ ಹಂತದಲ್ಲಿ ಆರೋಪಗಳ ಸ್ವರೂಪ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾದ ಮಾಹಿತಿ ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಬೆಳವಣಿಗೆಯಿಂದ ಮುಡಾ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ. ಈಗಾಗಲೇ ಹಲವು ವಿವಾದಗಳಿಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.
ಡಿ.ಬಿ. ನಟೇಶ್ ಅವರು ತಮ್ಮ ವಿರುದ್ಧದ ಆರೋಪಗಳು ಸಂಪೂರ್ಣ ಸುಳ್ಳು, ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಉನ್ನತ ಅಧಿಕಾರಿಗಳ ಹೆಸರು ಬಳಸಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಂಧನದ ನಂತರ ಸ್ನೇಹಮಯಿ ಕೃಷ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
