ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ರಾಷ್ಟ್ರದ ಗಮನ ಸೆಳೆದಿದೆ. ಸುಮಾರು 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸೌಜನ್ಯ ಅವರ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ತನಿಖೆಯ ಗುಣಮಟ್ಟದ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳನ್ನು ಕಟುವಾಗಿ ಪ್ರಶ್ನಿಸಿತು.
ಘಟನಾ ಸ್ಥಳಕ್ಕೆ ತನಿಖಾಧಿಕಾರಿಯೇ ಭೇಟಿ ನೀಡದಿರುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ನ್ಯಾಯಾಲಯ, ಪ್ರಕರಣ ನಡೆದಿದ್ದು ಹಲವು ವರ್ಷಗಳಾದರೂ ಸಮಗ್ರ ಹಾಗೂ ವೈಜ್ಞಾನಿಕ ತನಿಖೆ ನಡೆದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ನ್ಯಾಯಮೂರ್ತಿಗಳು, “14 ವರ್ಷಗಳು ಕಳೆದಿವೆ. ಆದರೆ ತನಿಖೆಯಲ್ಲಿನ ಹಲವು ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಕಾಪಾಡಬೇಕು. ನಮ್ಮ ಆದೇಶದ ನಂತರ ಮಧ್ಯಂತರ ವರದಿಯನ್ನೂ ಕೇಳುತ್ತೇವೆ” ಎಂದು ಸ್ಪಷ್ಟಪಡಿಸಿದರು.
ಈ ಪ್ರಕರಣದಲ್ಲಿ ಮರುತನಿಖೆ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ತನಿಖೆಯನ್ನು ಯಾವ ಸಂಸ್ಥೆಗೆ ವಹಿಸಬೇಕು ಹಾಗೂ ಯಾವ ರೀತಿಯಲ್ಲಿ ನಡೆಸಬೇಕು ಎಂಬ ವಿಚಾರದಲ್ಲಿ ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ.
ವಿಚಾರಣೆ ವೇಳೆ ಕರ್ನಾಟಕ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಅಗತ್ಯವಿದ್ದರೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮರುತನಿಖೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಇನ್ನೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ, ತನಿಖೆಯ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ಸಾಮಾನ್ಯ ತನಿಖೆ ಸಾಕಾಗುವುದಿಲ್ಲ ಎಂದು ವಾದಿಸಿದರು. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದರಿಂದ ತನಿಖೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.





