ಬೆಂಗಳೂರು, ಜೂನ್ 25: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC, NWKRTC, KKRTC) ಮತ್ತೊಂದು ಸಿಹಿಸುದ್ದಿ ನೀಡಿವೆ. ಉಚಿತ ಬಸ್ ಪಾಸ್ ಯೋಜನೆ ಜಾರಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಪಾಸ್ ಶುಲ್ಕವನ್ನು ಮರುಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.
ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವ ಮುನ್ನ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳು ತಮ್ಮ ಹಣವನ್ನು ವಾಪಸ್ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಬಂಧ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಪರಿಶೀಲನೆಯಾದ ಬಳಿಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ಅರ್ಜಿಗಳ ಪರಿಶೀಲನೆ ಪೂರ್ಣಗೊಂಡ ನಂತರ NEFT ಅಥವಾ RTGS ಮೂಲಕ ವಿದ್ಯಾರ್ಥಿಗಳ ಖಾತೆಗೆ 7 ದಿನಗಳೊಳಗೆ ಹಣ ಮರುಪಾವತಿಯಾಗಲಿದೆ ಎಂದು ಸಾರಿಗೆ ನಿಗಮಗಳು ತಿಳಿಸಿವೆ.
ಗಡಿಭಾಗದ ವಿದ್ಯಾರ್ಥಿಗಳಿಗೂ ಸೌಲಭ್ಯ
ಕರ್ನಾಟಕದಲ್ಲಿ ವಾಸವಿದ್ದು ಗಡಿ ರಾಜ್ಯಗಳಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಡಿ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ಡಿಕೆ ಶಿವಕುಮಾರ್ ಘೋಷಿಸಿದ್ದ ಯೋಜನೆಗೆ ಚಾಲನೆ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ಘೋಷಣೆ ಮಾಡಿದ್ದರು. ಇದೀಗ ಆ ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ದೊರೆಯುತ್ತಿದೆ.
ಈ ಯೋಜನೆಯಡಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರವು ಸುಮಾರು 286.08 ಕೋಟಿ ರೂ. ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಜೊತೆಗೆ ಪ್ರತಿ ಬಸ್ ಪಾಸ್‌ಗೆ 100 ರೂ. ಸಂಸ್ಕರಣಾ ಶುಲ್ಕ ಹಾಗೂ 50 ರೂ. ಅಪಘಾತ ಪರಿಹಾರ ನಿಧಿಯ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ.
ಸುಮಾರು 20 ಸಾವಿರ ವಿದ್ಯಾರ್ಥಿಗಳಿಗೆ ಮರುಪಾವತಿ
2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೇ 30ರಿಂದ ಜೂನ್ 9ರವರೆಗೆ ನಾಲ್ಕು ಸಾರಿಗೆ ನಿಗಮಗಳು ಒಟ್ಟು 19,792 ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಿವೆ. ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಬಂದಿರುವುದರಿಂದ, ಈ ಅವಧಿಯಲ್ಲಿ ಹಣ ಪಾವತಿಸಿ ಪಾಸ್ ಪಡೆದಿರುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಪಾಸ್ ಮೊತ್ತವನ್ನು ಮರುಪಾವತಿಸಲು ಸರ್ಕಾರ ಅನುಮೋದನೆ ನೀಡಿದೆ.
ಹೀಗಾಗಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಹಣವನ್ನು ಮರಳಿ ಪಡೆಯಬಹುದಾಗಿದೆ.
