ತನ್ವೀರ್ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ: ಮಂಡ್ಯದಲ್ಲಿ ಬೆಂಬಲಿಗರ ಪ್ರತಿಭಟನೆ

Untitled design 2026 08 03T155249.076

ಮಂಡ್ಯ (ಆ.3): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವ ನೂತನ ಸಚಿವರ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಸಚಿವ ಸ್ಥಾನ ದೊರೆತ ಶಾಸಕರು ಸಂತಸ ವ್ಯಕ್ತಪಡಿಸುತ್ತಿದ್ದರೆ, ಸಚಿವ ಸ್ಥಾನದಿಂದ ವಂಚಿತರಾದ ಕೆಲ ನಾಯಕರ ಬೆಂಬಲಿಗರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಅದರಲ್ಲೂ ಮೈಸೂರಿನ ನರಸಿಂಹರಾಜ (ಎನ್.ಆರ್.) ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ನೂರಾರು ಬೆಂಬಲಿಗರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು. “ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತನ್ವೀರ್ ಸೇಠ್ ಅವರಿಗೆ ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಮತ್ತೆ ಅವರನ್ನು ಕಡೆಗಣಿಸಲಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಪ್ರತಿಭಟನೆಯಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದ ಒಬ್ಬ ಬೆಂಬಲಿಗ ತನ್ನ ಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಯತ್ನಿಸಿದನು. ತಕ್ಷಣವೇ ಪೊಲೀಸರು ಸಮಯಪ್ರಜ್ಞೆಯಿಂದ ಆತನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯನ್ನು ವಶಪಡಿಸಿಕೊಂಡು ಅನಾಹುತ ತಪ್ಪಿಸಿದರು. ಈ ಘಟನೆ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು.

ಇನ್ನೊಂದೆಡೆ ಮಂಡ್ಯ ನಗರದಲ್ಲಿಯೂ ತನ್ವೀರ್ ಸೇಠ್ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ತನ್ವೀರ್ ಸೇಠ್ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೂ ಪದೇ ಪದೇ ಸಚಿವ ಸ್ಥಾನದಿಂದ ವಂಚಿಸುವುದು ನ್ಯಾಯಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಮಾತನಾಡಿ, “ಅಲ್ಪಸಂಖ್ಯಾತ ಸಮುದಾಯದ ಹಿರಿಯ ಶಾಸಕರನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಸಚಿವ ಸ್ಥಾನ ಸಿಗಲಿಲ್ಲ. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಾದರೂ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಬಾರಿಯೂ ಸಚಿವ ಸ್ಥಾನ ಕೈತಪ್ಪಿರುವುದು ಬೇಸರ ತಂದಿದೆ” ಎಂದು ಹೇಳಿದರು.

“ಇನ್ನೂ ಸಚಿವ ಸಂಪುಟ ವಿಸ್ತರಣೆಗೆ ಅವಕಾಶವಿದೆ. ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸ್ಥಿತಿಯನ್ನು ಮರುಪರಿಶೀಲಿಸಿ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ತಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆಯನ್ನೂ ನೀಡಿದರು.

ಮೈಸೂರಿನಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆಯಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಇದೇ ವೇಳೆ ಮತ್ತೊಂದು ದುಃಖಕರ ಘಟನೆ ಕೂಡ ಬೆಳಕಿಗೆ ಬಂದಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮನನೊಂದು ತನ್ವೀರ್ ಸೇಠ್ ಅವರೊಬ್ಬ ಬೆಂಬಲಿಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Exit mobile version