ಬೆಂಗಳೂರು: ಕೇವಲ 200 ರೂಪಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯೊಬ್ಬರನ್ನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ನಿವಾಸಿ ಗೌತಮ್ ಎಂದು ಪೊಲೀಸರು ಗುರುತಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ದರೋಡೆ ಮಾಡುವ ಉದ್ದೇಶದಿಂದ ಘಟನೆ ನಡೆದ ಸ್ಥಳಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ದೇವಿ ಅವರ ಬಳಿ ಹಣ ಕೇಳಿದ್ದು, 200 ರೂಪಾಯಿ ನೀಡದ ಹಿನ್ನೆಲೆ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಗಲಾಟೆ ವಿಕೋಪಕ್ಕೆ ತಿರುಗಿ ಗೌತಮ್ ಚಾಕುವಿನಿಂದ ದೇವಿ ಅವರ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ನಡೆದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಿಂದ ಕೆಲವು ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದು, ಹತ್ಯೆಗೆ ಬಳಸಲಾಗಿದೆ ಎನ್ನಲಾದ ಚಾಕು ಸೇರಿದಂತೆ ಇತರೆ ವಸ್ತುಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೌತಮ್ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಎನ್ನುವ ಮಾಹಿತಿ ಹೊರಬಂದಿದೆ. ಹಣಕ್ಕಾಗಿ ದೇವಿ ಅವರನ್ನು ಗುರಿಯಾಗಿಸಿಕೊಂಡಿದ್ದನೇ ಅಥವಾ ಘಟನೆ ಹಿಂದೆ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.





