ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಭಾನುವಾರ ಹಾಗೂ ಸೋಮವಾರ (ಜುಲೈ 20) ಜಿಲ್ಲೆಯಾದ್ಯಂತ ಎಲ್ಲಾ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ವಿಧಿವಿಧಾನಗಳಿಗೆ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸ್ಥಳದಲ್ಲಿ ಮೂಲಸೌಕರ್ಯ, ಭದ್ರತೆ, ವಾಹನ ನಿಲುಗಡೆ ಹಾಗೂ ಸಾರ್ವಜನಿಕರ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಈ ಸಿದ್ಧತಾ ಕಾರ್ಯಗಳ ಮೇಲ್ವಿಚಾರಣೆಯನ್ನು ಶಾಸಕ ಸಿ.ಎನ್. ಬಾಲಕೃಷ್ಣ ಅವರು ಸ್ವತಃ ಸ್ಥಳದಲ್ಲೇ ಮೊಕ್ಕಾಂ ಹೂಡಿ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿರುವ ಅವರು, ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಗೌರವಯುತವಾಗಿ ನೆರವೇರಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದಲ್ಲಿರುವ ಹೆಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಪಕ್ಷಗಳ ನಾಯಕರು ಹಾಗೂ ಗಣ್ಯರು ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ.
ಸಾರ್ವಜನಿಕ ದರ್ಶನದ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳು ಮತ್ತು ಪೂಜಾ ಕಾರ್ಯಗಳು ನಡೆಯಲಿವೆ. ನಂತರ ಪಾರ್ಥಿವ ಶರೀರವನ್ನು ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಪ್ರದೇಶಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಕೆಲಕಾಲ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಿದೆ.
ರಾಜ್ಯ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಂಚಾರ ನಿಯಂತ್ರಣ ಸೇರಿದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯಲ್ಲಿ ಶಾಂತಿಯುತವಾಗಿ ಭಾಗವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
