ನವದೆಹಲಿ: 2016ರಲ್ಲಿ ನಡೆದ ಯೋಗೀಶ್ ಗೌಡ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಹಲವು ತಿಂಗಳ ಜೈಲು ವಾಸದ ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.
ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಈ ಪ್ರಕರಣದಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದರು. ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನಲೆ
2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದ ಬಗ್ಗೆ ಆರಂಭದಲ್ಲಿ ಸ್ಥಳೀಯ ಪೊಲೀಸ್ ತನಿಖೆ ನಡೆಸಿದರೂ, ಬಳಿಕ ಪ್ರಕರಣವನ್ನು ಕೇಂದ್ರ ತನಿಖಾ ದಳ (CBI)ಗೆ ಹಸ್ತಾಂತರಿಸಲಾಗಿತ್ತು.
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿ, ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ಆರೋಪಗಳನ್ನು ದಾಖಲಿಸಿತ್ತು. ವಿಚಾರಣೆಯ ನಡುವೆಯೇ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪದಡಿ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನು ರದ್ದುಗೊಂಡಿತ್ತು.
ಸುಪ್ರೀಂ ಕೋರ್ಟ್‌ನಲ್ಲಿ ವಾದ
ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದರು. ಈಗಾಗಲೇ ಸಾಕ್ಷ್ಯಗಳ ದಾಖಲಾತಿ ಬಹುತೇಕ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಯಾವುದೇ ರೀತಿಯ ಸಾಕ್ಷ್ಯನಾಶ ಸಾಧ್ಯವಿಲ್ಲ. ಆದ್ದರಿಂದ ಜಾಮೀನು ನೀಡಲು ಅಡ್ಡಿಯಿಲ್ಲ ಎಂದು ಅವರು ನ್ಯಾಯಪೀಠದ ಮುಂದೆ ಮಂಡಿಸಿದರು.
ಸಿಬಿಐ ಪರವಾಗಿ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಲಾದರೂ, ನ್ಯಾಯಪೀಠವು ಪ್ರಕರಣದ ಪ್ರಗತಿ, ಸಾಕ್ಷ್ಯಗಳ ಸ್ಥಿತಿ ಮತ್ತು ವಿಚಾರಣೆಯ ಹಂತವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಗೆ ಗಡುವು
ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆಯನ್ನೂ ನೀಡಿದೆ. ಪ್ರಕರಣದ ವಿಚಾರಣೆಯನ್ನು ಎರಡು ತಿಂಗಳ ಒಳಗೆ ಪ್ರಾರಂಭಿಸಿ ಶೀಘ್ರ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಲಾಗಿದೆ. ಸುಮಾರು ಆರು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಕುಲಕರ್ಣಿಗೆ ಇದೀಗ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.




