ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನಕಲಕುವ ದುರಂತವೊಂದು ಸಂಭವಿಸಿದೆ. ಮನೆಯ ಸಮೀಪ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ವಾಟರ್ ಟ್ಯಾಂಕರ್ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ನೇಪಾಳ ಮೂಲದ ದಂಪತಿಗೆ ಸೇರಿದ ಒಂದೂವರೆ ವರ್ಷದ ಮಗು ಈ ದುರಂತದಲ್ಲಿ ಸಾವನ್ನಪ್ಪಿದೆ. ಮಗು ಆಟವಾಡುತ್ತಿದ್ದ ವೇಳೆ ವೇಗವಾಗಿ ಬಂದ ವಾಟರ್ ಟ್ಯಾಂಕರ್ ಮಗುವಿನ ಮೇಲೆ ಹರಿದಿದೆ ಎನ್ನಲಾಗಿದೆ. ಟ್ಯಾಂಕರ್ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಗು ಮೃತಪಟ್ಟಿದೆ.
ಆಟವಾಡುತ್ತಿದ್ದ ಕಂದಮ್ಮನಿಗೆ ಟ್ಯಾಂಕರ್ ಡಿಕ್ಕಿ
ನೇಪಾಳ ಮೂಲದ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಅವರ ಒಂದೂವರೆ ವರ್ಷದ ಮಗು ಎಂದಿನಂತೆ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ವಾಟರ್ ಟ್ಯಾಂಕರ್ ಮಗುವಿನ ಮೇಲೆ ಹರಿದಿದೆ. ಇದರಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ
ಅಪಘಾತದ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ಮಗುವಿನ ಸಾವಿನಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ತುಕಡಿಯನ್ನು ನಿಯೋಜಿಸಲಾಗಿದೆ.
ಟ್ಯಾಂಕರ್ ಸೀಜ್, ಚಾಲಕ ಎಸ್ಕೇಪ್
ಅಪಘಾತಕ್ಕೆ ಕಾರಣವಾದ ವಾಟರ್ ಟ್ಯಾಂಕರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಘಟನೆ ನಡೆದ ಬಳಿಕ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಚಾಲಕನ ಪತ್ತೆಗಾಗಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
