ಯಾದಗಿರಿ ಸೆ. 12: ರಾಜ್ಯದಲ್ಲಿ ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ. ರೈತರು ಮಳೆ ಇಲ್ಲದೆ ತಾವು ಬೆಳೆದ ಬೆಲೆಗೆ ಸರಿಯಾದ ನೀರು ಪೂರೈಕೆಯಾಗದೆ ಕಂಗಾಲಾಗಿದ್ದಾರೆ. ಈ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಿಸುತ್ತಿದೆ. ಈಗಾಗಲೇ 125 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ ಹಲವು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಸೆಪ್ಟೆಂಬರ್ 16 ರಂದು ಘೋಷಿಸುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಯಾದಗಿರಿಯಲ್ಲಿ ಮಾತನಾಡಿದ ಸಚಿವರು, ಮೂರನೇ ಪಟ್ಟಿಯಲ್ಲಿ ಸುಮಾರು 30ರಿಂದ 40 ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ. ಯಾದಗಿರಿ ಜಿಲ್ಲೆಯ ಯಾದಗಿರಿ, ಗುರುಮಠಕಲ್ ಹಾಗೂ ಸುರಪುರ ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಕಲಬುರಗಿ ಜಿಲ್ಲೆಯ ಹಲವು ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸರ್ಕಾರ ಯಾವುದೇ ರಾಜಕೀಯ ಮಾಡುವುದಿಲ್ಲ. ರೈತರ ಹಿತ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ರೈತರು ಹಾಗೂ ಸಾಮಾನ್ಯ ಜನರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ಬರಪೀಡಿತ ತಾಲೂಕುಗಳನ್ನು ಗುರುತಿಸಿ ಘೋಷಣೆ ಮಾಡಬೇಕಾಗುತ್ತದೆ. ಇದೇ ಕಾರಣಕ್ಕೆ ಜಿಲ್ಲೆ ಮತ್ತು ತಾಲೂಕು ಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಿ ಹಂತಹಂತವಾಗಿ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎಂದು ಕಂದಾಯ ಸಚಿವರು ಈಗಾಗಲೇ ಹೇಳಿರುವುದನ್ನು ಶರಣಪ್ರಕಾಶ್ ಪಾಟೀಲ್ ಉಲ್ಲೇಖಿಸಿದ್ದಾರೆ. ಪ್ರಸ್ತುತ 125 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ 75ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಛಾಯೆ ಇದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ ಮುಂದಿನ ಹಂತಗಳಲ್ಲಿ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 200 ತಾಲೂಕುಗಳನ್ನು ಹಂತಹಂತವಾಗಿ ಬರಪೀಡಿತ ಎಂದು ಘೋಷಿಸುವ ಅಂದಾಜು ಇದೆ. ಸೆಪ್ಟೆಂಬರ್ 16ರಂದು ಬಿಡುಗಡೆಯಾಗಲಿರುವ ಮೂರನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಮೂರು ತಾಲೂಕುಗಳು ಸೇರ್ಪಡೆಯಾಗುತ್ತವೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.
