ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

Untitled design (93)

ಬೆಂಗಳೂರು, (ಜುಲೈ 16): ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ಯೋಜನೆಗಳ ಪರಾಮರ್ಶೆ ನಡೆಸಿದರು.

ಸಭೆಯಲ್ಲಿ ರಾಜ್ಯದ ನಗರಗಳಲ್ಲಿ ಸುಸ್ಥಿರ, ಸುರಕ್ಷಿತ ಹಾಗೂ ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಯಿತು. ನಗರಗಳಲ್ಲಿ ನೂತನ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲು ಸಿದ್ಧಪಡಿಸಲಾಗುತ್ತಿರುವ ಕಾರ್ಯಸಾಧ್ಯತಾ ವರದಿ, ಅಗತ್ಯವಿರುವ ಕಡೆಗಳಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ, AI ಸಂಚಾರ ನಿರ್ವಹಣಾ ವ್ಯವಸ್ಥೆ (ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್) ಜಾರಿಗೊಳಿಸುವಿಕೆ ಹಾಗೂ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಗರಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳ ವಿಸ್ತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು.

ನಗರಗಳ ಬೆಳವಣಿಗೆ ಮತ್ತು ಸಾರ್ವಜನಿಕರ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ, ಪಾರದರ್ಶಕತೆ ಹಾಗೂ ಕಾಲಮಿತಿಗೆ ಆದ್ಯತೆ ನೀಡಿ, ಸಾರ್ವಜನಿಕರಿಗೆ ವಿಶ್ವಾಸಾರ್ಹ, ಸುಗಮ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ, ನಗರ ಭೂ ಸಾರಿಗೆ ಇಲಾಖೆಯ ಆಯುಕ್ತರಾದ ಮಣಿವಣ್ಣನ್ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version