ಬೆಳಗಾವಿ, ಅಕ್ಟೋಬರ್ 29: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಯಲ್ಲಿರುವ ಡಿ.ಕೆ. ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗುವುದಿಲ್ಲ, ಬದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಕನೇರಿ ಮಠದ ಸ್ವಾಮೀಜಿಯವರ ಬೆಂಬಲದೊಂದಿಗೆ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್‌ನ ನಾಯಕತ್ವ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಒಮ್ಮೆ ಸಿಎಂ ಆಗಬೇಕೆಂಬ ಕನಸಿನೊಂದಿಗೆ ಕಾಯುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡಲು ಕಾಂಗ್ರೆಸ್‌ನಲ್ಲಿ ತೀರ್ಮಾನವಾದರೆ, ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿಯವರ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಸಿದ್ದರಾಮಯ್ಯ ತಮ್ಮ ಪುತ್ರನ ಮೂಲಕ ಸಂದೇಶವನ್ನು ಸಾರಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರರನ್ನು ಮತ್ತೆ ನೇಮಿಸಿದರೆ, ತಾವು ‘ಜೆಸಿಬಿ’ ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಪಕ್ಷದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೃಪ್ತರಾಗದ ನಾಯಕರು ಸೇರಿಕೊಳ್ಳಲಿದ್ದಾರೆ ಎಂದಿದ್ದಾರೆ. ಪ್ರಸ್ತುತ ಬಿಜೆಪಿಯ 50ಕ್ಕೂ ಹೆಚ್ಚು ಶಾಸಕರು ಮತ್ತು ಹಲವಾರು ಸಂಸದರ ಬೆಂಬಲ ತಮಗಿದೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ ತಕ್ಷಣ ಜೆಸಿಬಿ ಪಕ್ಷವನ್ನು ಸಕ್ರಿಯಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಯತ್ನಾಳ್ ತಮ್ಮ ಹೊಸ ಪಕ್ಷವನ್ನು ಹಿಂದುತ್ವದ ಆಧಾರದ ಮೇಲೆ ಕಟ್ಟುವುದಾಗಿ ತಿಳಿಸಿದ್ದಾರೆ. ತಾವು ಭೇಟಿಯಾದ ಕಡೆಗಳಲ್ಲಿ ಜನರಿಂದ ಬೆಂಬಲ ಸಿಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿಯವರ ನಂತರ ಯೋಗಿ ಆದಿತ್ಯನಾಥ್ ಪ್ರಧಾನಮಂತ್ರಿಯಾಗಬೇಕೆಂಬ ಜನರ ಆಕಾಂಕ್ಷೆ ಇದೆ ಎಂದು ಯತ್ನಾಳ್ ಉಲ್ಲೇಖಿಸಿದ್ದಾರೆ. ಅಂತೆಯೇ, ರಾಜ್ಯದ ಜನರು ತಮ್ಮನ್ನು ಮುಖ್ಯಮಂತ್ರಿಯಾಗಿ ಕಾಣಲು ಬಯಸುತ್ತಿದ್ದಾರೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. ಒಂದು ವೇಳೆ ಬಿಜೆಪಿ ಹೈಕಮಾಂಡ್‌ನಿಂದ ಕರೆ ಬಾರದಿದ್ದರೆ, ಜೆಸಿಬಿ ಪಕ್ಷವನ್ನು ಸಕ್ರಿಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
			
 
					




 
                             
                             
                             
                            