ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಮೂವರ ಬಂಧನ

Untitled design (95)

ಬೆಂಗಳೂರು ನಗರದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ, ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಹಾಗೂ ಕೊಕೇನ್ ಜಪ್ತಿ ಮಾಡಲಾಗಿದೆ. ಮೂರು ವಿಭಿನ್ನ ಪ್ರಕರಣಗಳಲ್ಲಿ ಈ ದಾಳಿ ನಡೆದಿದ್ದು, ಅಂತಾರಾಷ್ಟ್ರೀಯ ಹಾಗೂ ಅಂತರರಾಜ್ಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮೊದಲ ಪ್ರಕರಣದಲ್ಲಿ, ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ಸುಮಾರು 2.20 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 180 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇಮ್ರಾನ್ ಪಾಷಾ ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಈ ಮಾದಕ ವಸ್ತುವನ್ನು ಸಾಗಿಸುತ್ತಿದ್ದನೆಂದು ತಿಳಿದುಬಂದಿದೆ. ಈತನ ವಿರುದ್ಧ ಈಗಾಗಲೇ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಕೂಡ ಬಹಿರಂಗವಾಗಿದೆ. ಪೊಲೀಸರು ಈತನ ಜಾಲದ ಇತರ ಸದಸ್ಯರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ಎರಡನೇ ಪ್ರಕರಣದಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಹತ್ವದ ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಒಬ್ಬ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ತಕ್ಷಣವೇ ಅಧಿಕಾರಿಗಳು ಆ ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಆರೋಪಿಯ ವಿಚಾರಣೆ ನಡೆಯುತ್ತಿದ್ದು, ಈ ಮಾದಕ ವಸ್ತು ಸಾಗಣೆ ಹಿಂದೆ ಇರುವ ಅಂತಾರಾಷ್ಟ್ರೀಯ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮೂರನೇ ಪ್ರಕರಣದಲ್ಲಿ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಚಿಕ್ಕಬಾಣಾವರ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಜನತ್ ಹಾಗೂ ಡ್ರಗ್ಸ್ ಸ್ವೀಕರಿಸುತ್ತಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಆಕೆ ಹಿಂದೆ ದೆಹಲಿಯಲ್ಲಿ ನಡೆದ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾಳೆ ಎಂಬ ಮಾಹಿತಿಯೂ ಹೊರಬಂದಿದೆ. ವಾಹಬ್ ಬೆಂಗಳೂರಿನ ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸುತ್ತಮುತ್ತ ಡ್ರಗ್ಸ್ ವಿತರಣೆಯಲ್ಲಿ ಸಕ್ರಿಯನಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಈ ಮೂರು ಪ್ರತ್ಯೇಕ ಕಾರ್ಯಾಚರಣೆಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಹಾಗೂ ಅಂತರಾಷ್ಟ್ರೀಯ ಮಾದಕ ದ್ರವ್ಯ ಜಾಲದ ಬಗ್ಗೆ ಮಹತ್ವದ ಸುಳಿವುಗಳು ಲಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡಿರುವ ಮಾದಕ ವಸ್ತುಗಳ ಮೂಲ ಮತ್ತು ವಿತರಣಾ ಜಾಲದ ಸಂಪೂರ್ಣ ವಿವರಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

Exit mobile version