ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಭೀಕರ ದುರಂತ ಸಂಭವಿಸಿದೆ. ಬಾಲಕರ ಹಾಸ್ಟೆಲ್ ಹಾಗೂ ಪಿಜಿ ಹೊಂದಿದ್ದ ಈ ಕಟ್ಟಡದ ಅವಶೇಷಗಳಡಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ಲಭ್ಯವಾದ ಬಳಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ಈವರೆಗೆ ಎಂಟು ಮಂದಿಯನ್ನು ಅವಶೇಷಗಳಿಂದ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ನೆಲಮಾಳಿಗೆ ಸೇರಿದಂತೆ ಐದು ಮಹಡಿಗಳನ್ನು ಹೊಂದಿದ್ದ ಕಟ್ಟಡದ ಅವಶೇಷಗಳಡಿ ಸುಮಾರು 40ರಿಂದ 50 ಮಂದಿ ಸಿಲುಕಿಕೊಂಡಿರುವ ಸಾಧ್ಯತೆಯಿದೆ.
ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಟ್ಟಡ ಕುಸಿದಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ದೆಹಲಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಇತರೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ, ಎಂಸಿಡಿ, ಸಿಎಟಿಎಸ್ ಮತ್ತು ನಾಗರಿಕ ರಕ್ಷಣಾ ತಂಡಗಳು ಸಹ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಕದ ಕಟ್ಟಡವನ್ನೂ ತೆರವುಗೊಳಿಸಲಾಗಿದೆ.
ಕಟ್ಟಡದ ನೆಲಮಹಡಿಯಲ್ಲಿ ಬಾಡಿಗೆಗೆ ನೀಡಲು ಜಾಗವನ್ನು ನವೀಕರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಕಟ್ಟಡ ಕುಸಿದಿದೆ ಎನ್ನಲಾಗಿದ್ದು, ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಪಿಜಿಯಲ್ಲಿ ಹಲವು ವಿದ್ಯಾರ್ಥಿಗಳು ವಾಸಿಸುತ್ತಿದ್ದ ಕಾರಣ, ಅವರಲ್ಲಿ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ, ಪೊಲೀಸ್ ಆಯುಕ್ತರು ಹಾಗೂ ಎನ್‌ಡಿಆರ್‌ಎಫ್ ಮಹಾನಿರ್ದೇಶಕರೊಂದಿಗೆ ಮಾತನಾಡಿ ಪರಿಸ್ಥಿತಿಯ ಮಾಹಿತಿ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುತ್ತಿದ್ದು, ಸಿಲುಕಿರುವವರನ್ನು ರಕ್ಷಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಶಾಸಕ ಅನಿಲ್ ಶರ್ಮಾ, ಕಟ್ಟಡದೊಳಗೆ ಸಿಲುಕಿರುವ ಕೆಲವರು ಫೋನ್ ಮೂಲಕ ಸಂಪರ್ಕಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಕಟ್ಟಡ ಕುಸಿದ ವೇಳೆ ಭೂಕಂಪದಂತಹ ಭಾರೀ ಶಬ್ದ ಕೇಳಿಬಂದಿದ್ದು, ಕೆಲವೇ ಕ್ಷಣಗಳಲ್ಲಿ ಪ್ರದೇಶವೆಲ್ಲ ಧೂಳು ಮತ್ತು ಹೊಗೆಯಿಂದ ಆವೃತವಾಗಿತ್ತು. ಸದ್ಯ ರಕ್ಷಣಾ ಸಿಬ್ಬಂದಿ ಅವಶೇಷಗಳನ್ನು ತೆರವುಗೊಳಿಸಿ ಜೀವಂತವಾಗಿರುವವರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.
