ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

Untitled design (59)

ಲಕ್ನೋ, ಜೂನ್ 19: ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ದೇಣಿ ಹಣವನ್ನು ದುರುಪಯೋಗಪಡಿಸುತ್ತಿದ್ದಾರೆ ಎಂಬ ಆರೋಪ ಪ್ರಕರಣ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ ಮಂದಿರದ ಹೆಸರಿಗೆ ಮಸಿ ಬಳಿಯುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯೋಗಿ, ಭಕ್ತರು ನೀಡಿರುವ ದೇಣಿಗೆ ಅತ್ಯಂತ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಬಳಿಯಾದರೂ ಲಿಖಿತ ದಾಖಲೆಗಳು ಅಥವಾ ಸಾಕ್ಷ್ಯಗಳಿದ್ದರೆ ಅವುಗಳನ್ನು ವಿಶೇಷ ತನಿಖಾ ತಂಡಕ್ಕೆ (SIT) ನೀಡುವಂತೆ ಅವರು ಮನವಿ ಮಾಡಿದ್ದಾರೆ.

ರಾಮ ಮಂದಿರ ಟ್ರಸ್ಟ್‌ನ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ಸತ್ಯಾಂಶಗಳು ಶೀಘ್ರದಲ್ಲೇ ಹೊರಬರುತ್ತವೆ ಎಂಬ ವಿಶ್ವಾಸವನ್ನು ಯೋಗಿ ಅದಿತ್ಯನಾಥ್ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ ರಾಜಕೀಯ ವಾಗ್ವಾದವೂ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಅಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಯೋಗಿ ಆರೋಪಿಸಿದ್ದಾರೆ. ರಾಮ ಮಂದಿರ ನಿರ್ಮಾಣದ ಸಮಯದಲ್ಲಿ ವಿರೋಧ ವ್ಯಕ್ತಪಡಿಸಿದ್ದವರು ಈಗ ದೇಣಿಗೆ ವಿಚಾರದಲ್ಲಿ ಕಳಕಳಿ ತೋರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಸಮಾಜವಾದಿ ಪಕ್ಷದ ವಿರುದ್ಧವೂ ಯೋಗಿ ವಾಗ್ದಾಳಿ ನಡೆಸಿದ್ದು, ರಾಮ ಭಕ್ತರ ಬಗ್ಗೆ ಈಗ ಮಾತನಾಡುತ್ತಿರುವವರು ಹಿಂದೆ ಕರಸೇವಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರು ಎಂದು ಆರೋಪಿಸಿದ್ದಾರೆ.

ರಾಮ ಮಂದಿರ ದೇಣಿಗೆ ವಿವಾದದ ಹಿನ್ನೆಲೆ, ಭಕ್ತರು ನೀಡಿದ ಹಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕರು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದರು. ಆರೋಪಗಳನ್ನು ರಾಮ ಮಂದಿರ ಟ್ರಸ್ಟ್ ನಿರಾಕರಿಸಿದ್ದು, ನಿಷ್ಪಕ್ಷಪಾತ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿತ್ತು.

ಸದ್ಯ SIT ತನಿಖೆ ಮುಂದುವರಿದಿದ್ದು, ಅಧಿಕಾರಿಗಳು ಹಲವು ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದ ಈ ಪ್ರಕರಣವು ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಸಂಪೂರ್ಣ ತನಿಖೆಯ ನಂತರವು ಸತ್ಯಾಸತ್ಯತೆ ತಿಳಿದುಬರಬೇಕಿದೆ.

Exit mobile version