ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

Untitled design 2026 03 30T233134.032

ನವದೆಹಲಿ: ದೇಶದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗುವ ಹಾಗೂ ದೇಶದ ಒಳಗಿದ್ದುಕೊಂಡೇ ಆರ್ಥಿಕ ಅಪರಾಧ ಎಸಗುವವರ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇದುವರೆಗೆ ಬರೋಬ್ಬರಿ 64,920 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಘೋಷಿಸಿದ್ದಾರೆ.

ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಒಟ್ಟು 1,105 ಪ್ರಕರಣಗಳ ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ವಿವರಿಸಿದರು. ಈ ಬೃಹತ್ ಜಾಲವನ್ನು ಭೇದಿಸುವ ಪ್ರಕ್ರಿಯೆಯಲ್ಲಿ ಇದುವರೆಗೆ 150 ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದಲ್ಲಿ 277 ದೋಷಾರೋಪ ಪಟ್ಟಿಗಳನ್ನು (Charge sheets) ದಾಖಲಿಸಲಾಗಿದೆ.

ವಂಚನೆಗೊಳಗಾದ ಸಾರ್ವಜನಿಕರ ಹಣವನ್ನು ಮರಳಿ ಬ್ಯಾಂಕ್‌ಗಳಿಗೆ ತಲುಪಿಸುವ ಪ್ರಕ್ರಿಯೆ ಯಶಸ್ವಿಯಾಗಿ ನಡೆಯುತ್ತಿದೆ. ಜಪ್ತಿ ಮಾಡಲಾದ ಆಸ್ತಿಗಳ ಪೈಕಿ 15,186 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಸಂಪೂರ್ಣವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಿಶೇಷವೆಂದರೆ, ಇದರಲ್ಲಿ 15,183 ಕೋಟಿ ರೂಪಾಯಿಗಳನ್ನು ಈಗಾಗಲೇ ಸಂಬಂಧಪಟ್ಟ ಬ್ಯಾಂಕುಗಳಿಗೆ ಹಸ್ತಾಂತರಿಸಲಾಗಿದ್ದು, ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ.

ದೇಶದ ಕಾನೂನಿನಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಓಡಿಹೋಗುವ ಆರ್ಥಿಕ ಅಪರಾಧಿಗಳ (Fugitive Economic Offenders) ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ವಂಚನೆ ಮಾಡಿರುವ ಅಪರಾಧಿಗಳು ಕೇವಲ ಆಸ್ತಿ ಕಳೆದುಕೊಳ್ಳುವುದು ಮಾತ್ರವಲ್ಲದೆ, ಅವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರ ಚಲನವಲನದ ಮೇಲೆ ನಿಗಾ ಇಡಲು ‘ಲುಕ್‌ಔಟ್ ನೋಟಿಸ್‌’ಗಳನ್ನು ಜಾರಿಗೊಳಿಸುವ ಮೂಲಕ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Exit mobile version