ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕೋರ್ಟ್

ನವದೆಹಲಿ (ಆ.3): ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ಸರ್ಕಾರ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ನಿರ್ದೇಶನಗಳನ್ನು ಕರ್ನಾಟಕ ಪಾಲಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನಿರ್ದೇಶನದಂತೆ ಸೋಮವಾರ (ಆಗಸ್ಟ್ 3, 2026) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿದ್ದು, ನಿಗದಿತ ಪ್ರಮಾಣದ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಏನಿದೆ ತಮಿಳುನಾಡಿನ ಆರೋಪ?

CWMA ಮತ್ತು CWRC ಆದೇಶದ ಪ್ರಕಾರ ಜುಲೈ 29ರಿಂದ ಆಗಸ್ಟ್ 12ರವರೆಗೆ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲು ಗಡಿ ಭಾಗದಲ್ಲಿ ಕರ್ನಾಟಕ ಬಿಡುಗಡೆ ಮಾಡಬೇಕಿತ್ತು. ಆದರೆ, ಜುಲೈ 29ರಿಂದ ಆಗಸ್ಟ್ 2ರವರೆಗೆ ಕೇವಲ 158ರಿಂದ 550 ಕ್ಯೂಸೆಕ್ ನೀರು ಮಾತ್ರ ತಮಿಳುನಾಡಿನ ಗಡಿ ಭಾಗಕ್ಕೆ ಹರಿದು ಬಂದಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಮಾಣವು ಆದೇಶಿತ ಪ್ರಮಾಣಕ್ಕಿಂತ ಬಹಳ ಕಡಿಮೆಯಾಗಿದ್ದು, ಕರ್ನಾಟಕ ಉದ್ದೇಶಪೂರ್ವಕವಾಗಿ ನೀರು ಬಿಡುಗಡೆ ಮಾಡುವುದನ್ನು ವಿಳಂಬ ಮಾಡುತ್ತಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ.

ಕರ್ನಾಟಕದ ಜಲಾಶಯಗಳ ಸ್ಥಿತಿ

ತಮಿಳುನಾಡು ತನ್ನ ಅರ್ಜಿಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಲಭ್ಯತೆಯ ಮಾಹಿತಿಯನ್ನೂ ಉಲ್ಲೇಖಿಸಿದೆ. 

ಈ ನಾಲ್ಕು ಜಲಾಶಯಗಳಲ್ಲಿ ಒಟ್ಟು 77.537 ಟಿಎಂಸಿ ನೀರಿನ ಸಂಗ್ರಹವಿದ್ದು, ಅದರಲ್ಲಿ 67.517 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ ಎಂದು ತಿಳಿಸಲಾಗಿದೆ.

ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿರುವುದಲ್ಲದೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ನೀರಿನ ಕೊರತೆ ಎಂಬ ವಾದಕ್ಕೆ ಅವಕಾಶವಿಲ್ಲ ಎಂದು ತಮಿಳುನಾಡು ಸರ್ಕಾರ ತನ್ನ ಅರ್ಜಿಯಲ್ಲಿ ಹೇಳಿದೆ.

ಸುಪ್ರೀಂ ಕೋರ್ಟ್‌ಗೆ ಮನವಿ

ತಮಿಳುನಾಡು ಸರ್ಕಾರ ತನ್ನ ಅರ್ಜಿಯಲ್ಲಿ, CWMA ಹಾಗೂ CWRC ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಹಾಗೂ ನಿಗದಿತ ಪ್ರಮಾಣದ ನೀರನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಆದೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಇದಲ್ಲದೆ, ಕಾವೇರಿ ನೀರು ಹಂಚಿಕೆ ಕುರಿತ ನ್ಯಾಯಮಂಡಳಿಯ ತೀರ್ಪು ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಹಿಂದಿನ ನಿರ್ದೇಶನಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಮತ್ತೆ ತೀವ್ರಗೊಂಡ ಕಾವೇರಿ ವಿವಾದ

ಪ್ರತಿ ವರ್ಷ ಮುಂಗಾರು ಅವಧಿಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಕರ್ನಾಟಕ ಮತ್ತು ತಮಿಳುನಾಡು ನಡುವಿನ ರಾಜಕೀಯ ಹಾಗೂ ಕಾನೂನು ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಈ ಬಾರಿಯೂ ಅದೇ ಪರಿಸ್ಥಿತಿ ಮರುಕಳಿಸಿದೆ. ನೀರಿನ ಲಭ್ಯತೆ, ರೈತರ ಹಿತಾಸಕ್ತಿ ಹಾಗೂ ಜಲಾಶಯಗಳ ನಿರ್ವಹಣೆ ಕುರಿತು ಎರಡೂ ರಾಜ್ಯಗಳು ವಿಭಿನ್ನ ನಿಲುವುಗಳನ್ನು ಹೊಂದಿರುವ ಹಿನ್ನೆಲೆ ವಿವಾದ ಮತ್ತೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ.

 

Exit mobile version