ಎನ್‌ಸಿಇಆರ್‌ಟಿ (NCERT) ಪಠ್ಯಪುಸ್ತಕಗಳಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಂಗದ ಘನತೆಗೆ ಧಕ್ಕೆ ತಂದಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಎನ್‌ಸಿಇಆರ್‌ಟಿಯ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.
ವಿವಾದದ ಮೂಲವೇನು ?
ಎಂಟನೇ ತರಗತಿಯ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಶೀರ್ಷಿಕೆಯಡಿ ಕೆಲವು ವಿವಾದಾತ್ಮಕ ಅಂಶಗಳನ್ನು ಸೇರಿಸಲಾಗಿತ್ತು. ಈ ವಿಷಯವು ನ್ಯಾಯಾಂಗ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಪ್ರಶ್ನಿಸುವಂತಿದೆ ಎಂದು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿ ಸದಸ್ಯ ಪೀಠವು ಪಠ್ಯದಲ್ಲಿನ ಈ ಅಂಶಗಳು ನ್ಯಾಯಾಂಗದ ಮೇಲೆ ಗುಂಡು ಹಾರಿಸಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿತು.
ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ತಪ್ಪನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕೇವಲ ಒಂದು ಪುಸ್ತಕವಲ್ಲದೆ, ಒಂದರಿಂದ ಹನ್ನೆರಡನೇ ತರಗತಿಯವರೆಗಿನ ಎಲ್ಲಾ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಸಮೀಕ್ಷೆ ಮಾಡಲು ಆದೇಶಿಸಲಾಗಿದೆ. ಇದಕ್ಕಾಗಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತಜ್ಞರ ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇನ್ನು ಮುಂದೆ ಯಾವುದೇ ವಿಷಯವನ್ನು ತಜ್ಞರ ಅಂತಿಮ ಅನುಮೋದನೆ ಇಲ್ಲದೆ ಪ್ರಕಟಿಸುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಕೋರ್ಟ್ ಕಠಿಣ ನಿಲುವು
ಈಗಾಗಲೇ ವಿವಾದಿತ ಪುಸ್ತಕದ ಮುದ್ರಣ, ವಿತರಣೆ ಮತ್ತು ಡಿಜಿಟಲ್ ಆವೃತ್ತಿಗಳ ಮೇಲೆ ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿದೆ. ಮಾರುಕಟ್ಟೆಯಲ್ಲಿರುವ ಎಲ್ಲಾ ಭೌತಿಕ ಪ್ರತಿಗಳನ್ನು ತಕ್ಷಣವೇ ಹಿಂಪಡೆಯಲು ಆದೇಶಿಸಿದೆ. ವಿಚಾರಣೆ ವೇಳೆ ಎನ್‌ಸಿಇಆರ್‌ಟಿ ನಿರ್ದೇಶಕರು ನ್ಯಾಯಾಲಯಕ್ಕೆ ಅಫಿಡೆವಿಟ್ ಸಲ್ಲಿಸಿ ಬೇಷರತ್ ಕ್ಷಮೆಯಾಚಿಸಿದರು ಹಾಗೂ ವಿವಾದಿತ ಪಠ್ಯವನ್ನು ಸಂಪೂರ್ಣವಾಗಿ ಹಿಂಪಡೆಯಲಾಗಿದೆ ಎಂದು ತಿಳಿಸಿದರು.
ನ್ಯಾಯಾಂಗದ ಘನತೆಯನ್ನು ಕುಗ್ಗಿಸುವ ಸಂಚುಗಳು ಪಠ್ಯದ ಮೂಲಕ ನಡೆಯಬಾರದು ಎಂದು ಕೋರ್ಟ್ ಎಚ್ಚರಿಸಿದೆ. ತಜ್ಞರ ಸಮಿತಿಯು ಪಠ್ಯಪುಸ್ತಕಗಳಲ್ಲಿರುವ ಇತರ ಸಂವೇದನಾಶೀಲ ವಿಷಯಗಳನ್ನೂ ಪರಿಶೀಲಿಸಲಿದ್ದು, ಶೈಕ್ಷಣಿಕ ಗುಣಮಟ್ಟ ಮತ್ತು ಸಾಂವಿಧಾನಿಕ ಸಂಸ್ಥೆಗಳ ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ನಿರೀಕ್ಷೆಯಿದೆ.
